ಸವಿರುಚಿ ಸಂಚಾರಿ ಕ್ಯಾಂಟೀನ್‌ಗೆ ಶೀಘ್ರ ಚಾಲನೆ: ಮಮ್ತಾಝ್
ಮಡಿಕೇರಿ, ನ. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017-18ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಸವಿರುಚಿ ಸಂಚಾರಿ ಕ್ಯಾಂಟೀನ್ ಯೋಜನೆಯು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಚಾಲನೆಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ಉಪನಿರ್ದೇಶಕಿ ಮಮ್ತಾಝ್ ಹೇಳಿದ್ದಾರೆ.
ಸವಿರುಚಿ ಸಂಚಾರಿ ಕ್ಯಾಂಟೀನ್ ಕಾರ್ಯಕ್ರಮ ಅನುಷ್ಠಾನ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟಗಳ ಮೇಲುಸ್ತುವಾರಿಯಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್ ನಡೆಯಲಿದೆ ಎಂದರು.
ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದು ಹಾಗೂ ಸ್ತ್ರೀಶಕ್ತಿ ಒಕ್ಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸರಕಾರ ಮುಂದಾಗಿದ್ದು, ಮಹಿಳಾ ಅಭಿವೃದ್ಧಿ ನಿಗಮದ ಮೂಲಕ, ಸ್ತ್ರೀಶಕ್ತಿ ಸಂಘಗಳಿಗೆ ಒಟ್ಟು 10 ಲಕ್ಷ ರೂ. ಸಹಾಯಧನದ ರೂಪದಲ್ಲಿ ಬಡ್ಡಿ ರಹಿತ ಸಾಲ ನೀಡಿ, ಕಾರ್ಯಕ್ರವು ಅನುಷ್ಠಾನಗೊಳಿಸಲಾಗುವುವುದು. ಸ್ತ್ರೀಶಕ್ತಿ ಗುಂಪುಗಳು ಸಾಲವನ್ನು ಪಡೆದು 6 ತಿಂಗಳ ನಂತರ 60 ತಿಂಗಳ ಕಾಲ ಸಾಲ ಮರುಪಾವತಿ ಮಾಡಲು ಅವಕಾಶವಿದೆ ಎಂದವರು ತಿಳಿಸಿದರು.
ಅಲ್ಲದೆ, ಗುಣಮಟ್ಟದ ಆಹಾರ ಪೂರೈಸುವುದು, ಸಂಚಾರಿ ಕ್ಯಾಂಟೀನ್ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಸೇರಿದಂತೆ ಸಂಚಾರಿ ಕ್ಯಾಂಟೀನ್ಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್, ಕಾರ್ಮಿಕ ಇಲಾಖೆಯ ಅಧಿಕಾರಿ ರಾಮಕೃಷ್ಣ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ಸ್ತ್ರೀಶಕ್ತಿ ಒಕ್ಕೂಟದ ರೆಹನಾ, ರಜನಿ, ಕವಿತಾ, ತಾರಾ, ರತ್ನ, ಆಹಾರ ಪರಿವೀಕ್ಷಕರು, ಸೇರಿದಂತೆ ಇತರರು ಉಪಸ್ಥಿತರಿದ್ದು ಸಲಹೆ ನೀಡಿದರು.