ಕೇಂದ್ರ ಸಚಿವನಾಗಲು ಅನಂತ್‌ಕುಮಾರ್ ಹೆಗಡೆ ನಾಲಾಯಕ್: ಸಿದ್ದರಾಮಯ್ಯ
ಹುಬ್ಬಳ್ಳಿ, ಡಿ. 5: ತನ್ನನ್ನು ಪಾಪದ ಪಿಂಡ ಎಂದಿರುವ ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಕೇಂದ್ರ ಸಚಿವರಾಗಲು ನಾಲಾಯಕ್ ಎಂದು ಟೀಕಿಸಿದರು.
ಮಂಗಳವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ನೀಡುವ ಹೇಳಿಕೆಗಳ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ನನಗಿಲ್ಲ ಎಂದರು.
ಜನಾಶೀರ್ವಾದ ಯಾತ್ರೆಗೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಡೆಸುತ್ತಿರುವ ಯಾತ್ರೆಗಳಿಗೆ ಯಾವ ಹಣವನ್ನು ಬಳಸುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.
ಧಾರವಾಡ ಜಿಲ್ಲೆಯ ಜಿ.ಪಂ.ಸದಸ್ಯ ಯೋಗೀಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದುದರಿಂದ, ಈ ಬಗ್ಗೆ ತಾನು ಹೆಚ್ಚಿನ ಮಾತುಗಳನ್ನಾಡಲು ಬಯಸುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ಎಐಸಿಸಿ ಅಧ್ಯಕ್ಷರಾಗಿ ರಾಹುಲ್‌ಗಾಂಧಿ ಅಧಿಕಾರ ಸ್ವೀಕರಿಸಿದರೆ ಪಕ್ಷದಲ್ಲಿ ದೊಡ್ಡ ಬದಲಾವಣೆ ಸಾಧ್ಯವಾಗುತ್ತದೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಸಿದ್ದರಾಮಯ್ಯ ತಿಳಿಸಿದರು.