ಮಂಗಳೂರು: ವಿಚಾರಣಾಧೀನ ಕೈದಿ ಮೃತ್ಯು
Update: 2017-12-05 21:57 IST
ಮಂಗಳೂರು, ಡಿ.5: ಕಳೆದ ಹಲವು ಸಮಯದಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ.
ಬೊಕ್ಕಪಟ್ಣ ನಿವಾಸಿ ಅನ್ಸಾರ್ (60) ಮೃತಪಟ್ಟ ವ್ಯಕ್ತಿ. ಸುಮಾರು 25 ವರ್ಷಗಳ ಹಿಂದೆ ಕೊಕೇನ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ. 8 ತಿಂಗಳ ಹಿಂದೆ ಪೊಲೀಸರು ಈತನನ್ನು ಬಂಧಿಸಿದ್ದರು. ಹಲವು ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ನ.2ರಂದು ಸಮಸ್ಯೆ ಉಲ್ಬಣಗೊಂಡ ಕಾರಣ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ನಡೆದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.