28 ಸಾವಿರ ಪೊಲೀಸ್ ಸಿಬ್ಬಂದಿಗಳ ಹುದ್ದೆ ಭರ್ತಿ: ರಾಮಲಿಂಗಾರೆಡ್ಡಿ
ಬೆಳಗಾವಿ, ಡಿ.6: ನಮ್ಮ ಸರಕಾರದ ನಾಲ್ಕೂವರೆ ವರ್ಷದ ಆಡಳಿತದಲ್ಲಿ 28 ಸಾವಿರಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬುಧವಾರ ನಗರದ ಕಂಗ್ರಾಳಿಯಲ್ಲಿರುವ ಕೆ.ಎಸ್.ಆರ್.ಪಿ ತರಬೇತಿ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಪುರುಷ ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಸದ್ಯಕ್ಕೆ ಒಂದು ಲಕ್ಷಕ್ಕೂ ಅಧಿಕ ಮಂದಿ ಕಾರ್ಯ ನಿರ್ವಹಿಸುತ್ತಿದ್ದು. ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
11 ಸಾವಿರ ಮನೆ ನಿರ್ಮಾಣ: ರಾಜ್ಯ ಸರಕಾರವು ಪೊಲೀಸ್ ಸಿಬ್ಬಂದಿಗಳಿಗಾಗಿ 2273 ಕೋಟಿ ರೂ.ವೆಚ್ಚದಲ್ಲಿ ಒಟ್ಟು 11 ಸಾವಿರ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಸದ್ಯ ಎರಡು ಸಾವಿರಕ್ಕೂ ಅಧಿಕ ಮನೆಗಳನ್ನು ನಿರ್ಮಿಸಲಾಗಿದೆ. 2020ರ ವೇಳೆಗೆ ಎಲ್ಲ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.
ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಇನ್ನಿತರ ಹೆಚ್ಚಿನ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರುತ್ತಿರುವುದು ಸಂತಸದ ಸಂಗತಿಯಾಗಿದೆ. ಕೆ.ಎಸ್.ಆರ್.ಪಿ ಸಿಬ್ಬಂದಿ ಉತ್ತಮ ಸೇವೆಯನ್ನು ಒದಗಿಸುತ್ತಿದ್ದು, ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಹೊಸದಾಗಿ ಕೆಲಸಕ್ಕೆ ಸೇರುತ್ತಿರುವ ಪ್ರಶಿಕ್ಷಣಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿರುವಂತೆ ತಮ್ಮ ಸೇವಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕಿ ನೀಲಮಣಿ ಎನ್.ರಾಜು ಮಾತನಾಡಿ, ಸರಕಾರದಿಂದ 1900 ಪೊಲೀಸ್ ಸಿಬ್ಬಂದಿಗಳ ನೇಮಕಾತಿಗೆ ಈಗಾಗಲೇ ಪ್ರಕ್ರಿಯೆ ಚಾಲನೆಯಲ್ಲಿದೆ. ಜೊತೆಗೆ 6300 ಪೊಲೀಸ್ ಸಿಬ್ಬಂದಿಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಒಟ್ಟು 11 ಕೆ.ಎಸ್.ಆರ್.ಪಿ ತರಬೇತಿ ಶಾಲೆಗಳು ಇದ್ದು ಈಗ ನೂತನವಾಗಿ ತುಮಕೂರಿನಲ್ಲಿ 12ನೆ ಪೊಲೀಸ್ ತರಬೇತಿ ಶಾಲೆಯನ್ನು ಆರಂಭಿಸಲಾಗುತ್ತಿದೆ. ಕೆ.ಎಸ್.ಆರ್.ಪಿ ಬಸ್‌ಗಳಲ್ಲಿ ಶೀಘ್ರವೆ ಶೌಚಾಲಯದ ವ್ಯವಸ್ಥೆ ಮಾಡಲಾಗುವುದು ಹಾಗೂ ಪೊಲೀಸ್ ಸಿಬ್ಬಂದಿಗಾಗಿ ಮೊಬೈಲ್ ಶೌಚಾಲಯವನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಕಾನ್‌ಸ್ಟೇಬಲ್‌ಗಳನ್ನು ಹೆಡ್‌ಕಾನ್‌ಸ್ಟೇಬಲ್‌ಗಳನ್ನಾಗಿ ಭಡ್ತಿ ಮಾಡುವಾಗ ಅಗತ್ಯ ತರಬೇತಿ ನೀಡಿ ಭರ್ತಿ ಮಾಡಲಾಗುವುದು. ಬ್ಯಾಂಡ್ ತಂಡಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಬ್ಯಾಂಡ್ ತಂಡಕ್ಕೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಪ್ರತ್ಯೇಕ ನೇಮಕಾತಿ ನಡೆಸಲು ಚಿಂತಿಸಲಾಗುತ್ತಿದೆ ಎಂದು ನೀಲಮಣಿ ರಾಜು ತಿಳಿಸಿದರು.
ಕೆ.ಎಸ್.ಆರ್.ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್, ಬೆಳಗಾವಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಎನ್.ಜಗದೀಶ್, ಬೆಳಗಾವಿ ಉತ್ತರ ವಲಯ ಐಜಿಪಿ ಡಾ.ಕೆ.ರಾಮಚಂದ್ರರಾವ್, ಐಜಿಪಿ ಚರಣರೆಡ್ಡಿ, ಎಸ್‌ಪಿ ರವಿಕಾಂತೇಗೌಡ, ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಎಸ್.ಝಿಯಾವುಲ್ಲಾ, ಜಿ.ಪಂ.ಸಿಇಓ ರಾಮಚಂದ್ರನ್‌ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.