×
Ad

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಚುನಾವಣಾ ಪ್ರಚಾರ

Update: 2017-12-06 20:28 IST

ಬೆಂಗಳೂರು, ಡಿ.6: ಕಾಂಗ್ರೆಸ್ ಶಾಸಕರು ಪ್ರತಿನಿಧಿಸುತ್ತಿರುವ 121 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದು, ಇತರೆ ಪಕ್ಷದ ಶಾಸಕರು ಇರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವ ಹೊಣೆಗಾರಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರಚಾರ ಸಮತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್, ಎಸ್.ಆರ್. ಪಾಟೀಲ್‌ಗೆ ನೀಡಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಉದ್ದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ರಾಜ್ಯ ಸರಕಾರದ ಎಲ್ಲ ಕಾರ್ಯಕ್ರಮಗಳು, ಯೋಜನೆಗಳ ಸಮರ್ಪಕ ಅನುಷ್ಠಾನವಾಗಬೇಕು. ಜತೆಗೆ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಪ್ರಚಾರ ಮಾಡಬೇಕು. ಇತರೆ ಪಕ್ಷದ ಶಾಸಕರು ಇರುವ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕರನ್ನು ಆಹ್ವಾನಿಸಬೇಕಾಗುತ್ತದೆ. ಆದುದರಿಂದ, ಇನ್ನುಳಿದ 103 ಕ್ಷೇತ್ರಗಳಲ್ಲಿ ಪಕ್ಷದ ವತಿಯಿಂದ ಪ್ರಚಾರ ಕಾರ್ಯ ಹಮ್ಮಿಕೊಳ್ಳಲು ವೇಣುಗೋಪಾಲ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಂಬರೀಶ್ ಗೈರು: ಮಂಡ್ಯ ಜಿಲ್ಲೆಯ ಮುಖಂಡರೊಂದಿಗೆ ನಡೆದ ಸಭೆಗೆ ಮಾಜಿ ಸಚಿವ ಹಾಗೂ ಶಾಸಕ ಅಂಬರೀಶ್ ಗೈರುಹಾಜರಾಗಿದ್ದರು. ಸಭೆಯಲ್ಲಿ ಪಾಲ್ಗೊಳ್ಳುವಂತೆ ವೇಣುಗೋಪಾಲ್ ಕೆಪಿಸಿಸಿ ಮೂಲಕ ಅಂಬರೀಶ್‌ಗೆ ಮಾಹಿತಿಯನ್ನು ರವಾನಿಸಿದ್ದರು. ಆದರೂ, ಅಂಬರೀಶ್ ಸಭೆಗೆ ಹಾಜರಾಗದೆ ಮಂಡ್ಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಮಾಜಿ ಸಂಸದೆ ರಮ್ಯಾ ಬರುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಯಾವುದಾದರೂ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವುದರಿಂದ ಅಂಬರೀಶ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಕಚೇರಿಗೆ ನಿರ್ಮಾಪಕ ಕೆ.ಮಂಜು ಭೇಟಿ: ತುಮಕೂರು ಜಿಲ್ಲೆಯ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಚಿತ್ರ ನಿರ್ಮಾಪಕ ಕೆ.ಮಂಜು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಈಗಾಗಲೆ ತುರುವೇಕೆರೆಯಲ್ಲಿ ಚುನಾವಣಾ ಸಿದ್ಧತೆಯನ್ನು ಕೆ.ಮಂಜು ಆರಂಭಿಸಿದ್ದು, ಅವರಿಗೆ ಟಿಕೆಟ್ ನೀಡುವ ಭರವಸೆಯನ್ನು ಮುಖಂಡರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ಶಾಸಕರ ವಿರುದ್ಧ ಆಕ್ರೋಶ: ರಾಜಧಾನಿ ಬೆಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಸರಿಯಾಗಿ ನಡೆದಿಲ್ಲ ಎಂದು ನಗರವನ್ನು ಪ್ರತಿನಿಧಿಸುತ್ತಿರುವ ಸಚಿವರು, ಶಾಸಕರು ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ವೇಣುಗೋಪಾಲ್ ತರಾಟೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನ ಕೆಲವು ಶಾಸಕರು ಸ್ಥಳೀಯ ಕಾರ್ಪೊರೇಟರ್‌ಗಳ ಜತೆ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಅಂತಹ ಹೊಂದಾಣಿಕೆ ರಾಜಕಾರಣ ಕಂಡು ಬಂದರೆ ಅಂತಹ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ.

ರಿಯಲ್ ಎಸ್ಟೇಟ್ ವ್ಯವಹಾರವನ್ನು ಬಿಟ್ಟು ತಮ್ಮ ತಮ್ಮ ಕ್ಷೇತ್ರಗಳತ್ತ ಗಮನ ಹರಿಸುವಂತೆ ಕಾಂಗ್ರೆಸ್ ಶಾಸಕರು ಹಾಗೂ ಟಿಕೆಟ್ ಆಕಾಂಕ್ಷಿಗಳಿಗೆ ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ಎಂ.ಕೃಷ್ಣಪ್ಪ, ತನ್ವೀರ್ ಸೇರ್, ಡಾ.ಗೀತಾ ಮಹದೇವಪ್ರಸಾದ್, ಪ್ರಮೋದ್ ಮಧ್ವರಾಜ್, ಸಂಸದರಾದ ವೀರಪ್ಪಮೊಯ್ಲಿ, ಡಿ.ಕೆ.ಸುರೇಶ್, ಧೃವನಾರಾಯಣ್, ಡಾ.ರಹ್ಮಾನ್‌ಖಾನ್, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News