ಪಾಕ್‌ನಲ್ಲಿ ಚೀನೀಯರ ಮೇಲೆ ಉಗ್ರ ದಾಳಿ ಸಾಧ್ಯತೆ: ನಾಗರಿಕರಿಗೆ ಚೀನಾ ಎಚ್ಚರಿಕೆ

Update: 2017-12-08 17:28 GMT

ಬೀಜಿಂಗ್, ಡಿ. 8: ಪಾಕಿಸ್ತಾನದಲ್ಲಿರುವ ಚೀನಾ ನೆಲೆಗಳನ್ನು ಗುರಿಯಾಗಿಸಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಯಿದೆ ಎಂಬುದಾಗಿ ಪಾಕಿಸ್ತಾನದಲ್ಲಿರುವ ಚೀನಾ ರಾಷ್ಟ್ರೀಯರಿಗೆ ಚೀನಾ ಶುಕ್ರವಾರ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದ ಪರಮಾಪ್ತ ದೇಶವಾಗಿರುವ ಚೀನಾ, ಆ ದೇಶದ ಹಲವಾರು ಮೂಲಸೌಕರ್ಯ ಯೋಜನೆಗಳಿಗೆ ಭಾರೀ ಪ್ರಮಾಣದಲ್ಲಿ ಆರ್ಥಿಕ ನೆರವು ನೀಡುತ್ತಿರುವುದನ್ನು ಸ್ಮರಿಸಬಹುದಾಗಿದೆ.

ಪಾಕಿಸ್ತಾನದಲ್ಲಿ ಅನುಷ್ಠಾನಗೊಳ್ಳುತ್ತಿರುವ 57 ಬಿಲಿಯ ಡಾಲರ್ (3.67 ಲಕ್ಷ ಕೋಟಿ ರೂಪಾಯಿ) ವೆಚ್ಚದ ‘ಬೆಲ್ಟ್ ಆ್ಯಂಡ್ ರೋಡ್’ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಯೋಜನೆಗಳ ಜಾರಿಗಾಗಿ ಸಾವಿರಾರು ಚೀನಾ ಕೆಲಸಗಾರರು ಪಾಕಿಸ್ತಾನಕ್ಕೆ ಹೋಗಿದ್ದಾರೆ.

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರ ಮಹತ್ವಾಕಾಂಕ್ಷೆಯ ‘ಬೆಲ್ಟ್ ಆ್ಯಂಡ್ ರೋಡ್’ ಯೋಜನೆಯು ಚೀನಾವನ್ನು ಮಧ್ಯಪ್ರಾಚ್ಯ ಮತ್ತು ಯುರೋಪ್‌ನೊಂದಿಗೆ ಸಂಪರ್ಕಿಸುತ್ತದೆ.

ಚೀನಾ ಕಂಪೆನಿಗಳ ಉದ್ಯೋಗಿಗಳು ಹಾಗೂ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ನಲ್ಲಿ ಹೂಡಿಕೆ ಮಾಡುವ ವ್ಯಕ್ತಿಗತ ಉದ್ಯಮಿಗಳಿಗೆ ರಕ್ಷಣೆ ನೀಡುವುದು ಚೀನಾ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದೆ.

‘‘ಪಾಕಿಸ್ತಾನದಲ್ಲಿರುವ ಚೀನಾ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ಧ ಸರಣಿ ದಾಳಿಗಳನ್ನು ನಡೆಸಲು ಭಯೋತ್ಪಾದಕರು ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ’’ ಎಂದು ಪಾಕಿಸ್ತಾನದಲ್ಲಿರುವ ಚೀನಾ ರಾಯಭಾರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ಹಾಕಿದ ಹೇಳಿಕೆಯೊಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News