ವಿದ್ಯಾವಂತರಲ್ಲಿ ಸಂಸ್ಕೃತಿ, ಸಂಸ್ಕಾರ ಮರೆಯಾಗುತ್ತಿದೆ: ಶಿಲ್ಪಾ

Update: 2017-12-10 17:24 GMT

ಚಿಕ್ಕಮಗಳೂರು, ಡಿ.10: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನೂ ಮೈಗೂಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಾರಾಜಶೇಖರ್ ಸಲಹೆ ಮಾಡಿದ್ದಾರೆ.

  ಅವರು ನಗರದ ಎಂಇಎಸ್ ಪ್ರೌಢಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ಪಠ್ಯದ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನೂ ಕಲಿಸಬೇಕು ಎಂದು ಮನವಿ ಮಾಡಿದರು.

ಜಾಗತೀಕರಣ ಮತ್ತು ಆಧುನೀಕರಣದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚುತ್ತಿದೆ ಆದರೆ ಶಿಕ್ಷಣವಂತರಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಮರೆಯಾಗುತ್ತಿದೆ ಇದರಿಂದಾಗಿ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿ ವಿನಯ, ವಿಧೇಯತೆ ಮತ್ತು ಮಾನವೀಯತೆಯನ್ನು ಬೆಳೆಸಬೇಕು ಎಂದರು.

  ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ನಮ್ಮ ಸಂಸ್ಕೃತಿ, ಸಂಸ್ಕಾರ, ವಿನಯ ಮತ್ತು ವಿಧೇಯತೆಯನ್ನು ಮೈಗೂಡಿಸಿಕೊಂಡರೆ ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

   ಸಮಾರಂಭದಲ್ಲಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲಾಯಿತು.

ಸಮಾರಂಭಕ್ಕೆ ಮುನ್ನ ನಡೆದ ಕ್ರೀಡಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಉದ್ಘಾಟಿಸಿದರು. ವಿದ್ಯಾರ್ಥಿ ಜೆ.ಕಿರಣ್ ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯಕುಮಾರ್, ಸಹಕಾರ್ಯದರ್ಶಿ ಎಸ್.ಶಂಕರನಾರಾಯಣಭಟ್, ನಿರ್ದೇಶಕಿ ಜಯಶ್ರೀ ಜೋಶಿ, ಆಡಳಿತಾಧಿಕಾರಿ ಶಾಂತಕುಮಾರಿ, ಮುಖ್ಯಶಿಕ್ಷಕ ಬಿ.ಎಂ.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News