ಇಂದು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಘೋಷಣೆ; ಡಿ.16ರಂದು ಅಧಿಕಾರ ಹಸ್ತಾಂತರ

Update: 2017-12-11 05:31 GMT

ಹೊಸದಿಲ್ಲಿ, ಡಿ.11: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಸೋಮವಾರ ಘೋಷಿಸಲಾಗುವುದು. ಡಿ.16ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಹುಲ್ ಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷತೆಗೆ ಸಲ್ಲಿಸಲಾಗಿರುವ ನಾಮಪತ್ರ ಹಿಂಪಡೆಯಲು ಡಿ.11ರಂದು ಕೊನೆಯ ದಿನವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಇದರಿಂದಾಗಿ ಅವರ ಆಯ್ಕೆ ಹಾದಿ ಸುಗಮವಾಗಿದ್ದು, ರಾಹುಲ್ ಗಾಂಧಿ ಅಖಿಲ ಭಾರತೀಯ  ಕಾಂಗ್ರೆಸ್ (ಎಐಸಿಸಿ)  ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣಾ ಅಧಿಕಾರಿ ಮುಲ್ಲಪಳ್ಳಿ ರಾಮಚಂದ್ರನ್‌ ಸೋಮವಾರ ಅಪರಾಹ್ನ 3:30ಕ್ಕೆ ಪತ್ರಿಕಾ ಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನುಅಧಿಕೃತವಾಗಿ  ಪ್ರಕಟಿಸಲಿದ್ದಾರೆ.

ಸಿಇಎ  ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್  ಅವರು ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಪ್ರಮಾಣಪತ್ರವನ್ನು ನೀಡಲಿರುವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

2004ರಲ್ಲಿ ರಾಜಕೀಯ ಪ್ರವೇಶಿಸಿದ್ದ   ರಾಹುಲ್‌ 2013ರಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಾಲ್ಕು ವರ್ಷಗಳ ಬಳಿಕ 47ರ ಹರೆಯದ ರಾಹುಲ್ ಗಾಂಧಿ ಅವರು  132 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

1998ರಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 19 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದ ಸೋನಿಯಾ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News