ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಿದ್ಧ: ವೀರಪ್ಪಮೊಯ್ಲಿ

Update: 2017-12-11 14:53 GMT

ಬೆಂಗಳೂರು, ಡಿ.11: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಜನವರಿ ಅಂತ್ಯಕ್ಕೆ ಸಿದ್ಧಪಡಿಸಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗೆ ಹಸ್ತಾಂತರಿಸಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಎಂ.ವೀರಪ್ಪಮೊಯ್ಲಿ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲೆಗಳನ್ನು ಆರು ವಿಭಾಗಗಳಾಗಿ ವಿಂಗಡಿಸಿ ಪ್ರಣಾಳಿಕೆ ಸಮಿತಿಯು ಸಭೆ ನಡೆಸುತ್ತಿದೆ. ಈಗಾಗಲೆ ಮಂಗಳೂರು ವಿಭಾಗ ಹಾಗೂ ಹುಬ್ಬಳ್ಳಿ-ಧಾರವಾಡ ವಿಭಾಗದ ಸಭೆಯನ್ನು ನಡೆಸಲಾಗಿದೆ ಎಂದರು.
ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ತಜ್ಞರು, ಟ್ರೇಡ್‌ಯೂನಿಯನ್ ಪ್ರತಿನಿಧಿಗಳು, ಶಿಕ್ಷಣ ತಜ್ಞರ ಜತೆ ಸಮಾಲೋಚನೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಪ್ರತಿನಿಧಿಗಳೊಂದಿಗೆ ಇಂದು ಚರ್ಚೆ ನಡೆಸಲಾಗುತ್ತಿದೆ. ಬೆಂಗಳೂರು ನಗರದ ಅಭಿವೃದ್ಧಿ, ಸಂಚಾರ ದಟ್ಟಣೆ, ತಾಜ್ಯವಿಲೇವಾರಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ವೀರಪ್ಪಮೊಯ್ಲಿ ತಿಳಿಸಿದರು.
ಚುನಾವಣಾ ಪ್ರಣಾಳಿಕೆ ಸಮಿತಿಯನ್ನು 15 ಉಪ ಸಮಿತಿಗಳನ್ನಾಗಿ ವಿಂಗಡನೆ ಮಾಡಲಾಗಿದೆ. ಜನವರಿ 11ರಂದು ಸಮಿತಿಯ ಪ್ರಮುಖ ಸಭೆ ನಡೆಯಲಿದೆ. ಆ ನಂತರ, ಪ್ರಣಾಳಿಕೆಯ ಸ್ವರೂಪದ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಜತೆ ಚರ್ಚೆ ಮಾಡಲಾಗುವುದು ಎಂದು ಅವರು ಹೇಳಿದರು.

‘ನವ ಕರ್ನಾಟಕ ವಿಷನ್ 2025’ ವರದಿಯು ಸರಕಾರದ ಕೈ ಸೇರಿದೆ. ಅದರಲ್ಲಿರುವ ಅಂಶಗಳನ್ನು ಪ್ರಣಾಳಿಕೆಯಲ್ಲಿ ಅಡಕ ಮಾಡುತ್ತೇವೆ. ಅಲ್ಲದೆ, ವಿ.ಆರ್.ಸುದರ್ಶನ್ ಅಧ್ಯಕ್ಷತೆಯಲ್ಲಿ 2013ರ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳು ಎಷ್ಟರ ಮಟ್ಟಿಗೆ ಈಡೇರಿದೆ, ಯಾವುದು ಈಡೇರಿಲ್ಲ ಎಂಬುದರ ಕುರಿತು ಪರಾಮರ್ಶೆಯನ್ನು ನಡೆಸುತ್ತೇವೆ ಎಂದು ಮೊಯ್ಲಿ ತಿಳಿಸಿದರು.

ನಮ್ಮ ಚುನಾವಣಾ ಪ್ರಣಾಳಿಕೆಯು ಜನಪರವಾಗಿರಲಿದೆ. ರಾಜ್ಯದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ಮಾಡುವ ನಿಟ್ಟಿನಲ್ಲಿ ಐದು ಪ್ರಮುಖ ಕಾರ್ಯಕ್ರಮಗಳನ್ನು ಜಾರಿಗೆ ತರಲಿದ್ದೇವೆ. ಪ್ರಣಾಳಿಕೆಯಲ್ಲಿ ಉಲ್ಲೇಖಿಸುವ ಸರಕಾರದ ಕಾರ್ಯಕ್ರಮಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದ್ದೇವೆ. ‘ಪ್ರತಿಬಿಂಬ’ ಹೆಸರಿನಲ್ಲಿ ಪ್ರಣಾಳಿಕೆಯಲ್ಲಿರುವ ಕಾರ್ಯಕ್ರಮಗಳ ವಿವರ ಸಿಗಲಿದೆ ಎಂದು ಅವರು ಹೇಳಿದರು.

ಕಳೆದ ನಾಲ್ಕೂವರೆ ವರ್ಷದಲ್ಲಿ ರಾಜ್ಯದ 5 ಕೋಟಿ ಜನರಿಗೆ ಪ್ರಯೋಜನವಾಗುವ ವಿಶೇಷ ಕಾರ್ಯಕ್ರಮಗಳು ಜಾರಿಯಾಗಿವೆ. ಕ್ಷೀರಭಾಗ್ಯ, ವಸತಿ ಭಾಗ್ಯ, ಪಶು ಭಾಗ್ಯ, ಇಂದಿರಾ ಕ್ಯಾಂಟೀನ್, ರೈತರ ಸಾಲ ಮನ್ನಾ ಇತ್ಯಾದಿ ಜನಪರ ಕಾರ್ಯಕ್ರಮಗಳ ಜಾರಿ ಮಾಡಲಾಗಿದೆ ಎಂದು ಮೊಯ್ಲಿ ತಿಳಿಸಿದರು.

ರೈತರ 50 ಸಾವಿರ ರೂ.ವರೆಗಿನ ಸಾಲ ಮನ್ನಾದಿಂದ 24 ಲಕ್ಷ ರೈತರಿಗೆ ಅನುಕೂಲವಾಗಿದೆ. ಪ್ರತಿ ಲೀಟರ್ ಹಾಲಿಗೆ 5 ರೂ.ಸಹಾಯ ಧನ ನೀಡುತ್ತಿರುವುದರಿಂದ 2013ಕ್ಕೆ ಮುನ್ನ ಇದ್ದ 35 ಲಕ್ಷ ಲೀಟರ್ ಹಾಲು ಉತ್ಪಾದನಾ ಪ್ರಮಾಣವು ಈಗ 80 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. 79 ಲಕ್ಷ ರೈತರಿಗೆ ಉಚಿತವಾಗಿ ವಿದ್ಯುತ್ ಪೂರೈಕೆ, 3.50 ಕೋಟಿ ಜನರಿಗಾಗಿ ಅನ್ನಭಾಗ್ಯ, ಇಡೀ ದೇಶದಲ್ಲಿ ಅತೀ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.ಎಲ್.ಶಂಕರ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾದ ಸೈಯದ್ ಝಮೀರ್ ಪಾಷ, ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News