ಕರಾವಳಿ ಹೊತ್ತಿ ಉರಿಯಲಿದೆ: ಶೋಭಾ ಕರಂದ್ಲಾಜೆ ಎಚ್ಚರಿಕೆ

Update: 2017-12-12 08:01 GMT

ಬೆಂಗಳೂರು, ಡಿ.12: ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಮಾಡದಿದ್ದರೆ "ಕರಾವಳಿ ಹೊತ್ತಿ ಉರಿಯಲಿದೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.

ಹೊನ್ನಾವರದಲ್ಲಿ ಇತ್ತೀಚೆಗೆ ನಡೆದ ಪರೇಶ್ ಮೇಸ್ತಾ ನಿಗೂಢ ಸಾವು ಸೇರಿದಂತೆ ರಾಜ್ಯದಲ್ಲಿ ನಡೆದ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯ ಮುಖಂಡರು ನಗರದಲ್ಲಿಂದು ವಿಧಾನಸೌಧದ ಬಳಿ ಡಾ.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ರಾಜಭವನಕ್ಕೆ ಮೆರವಣಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ  ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಘಪರಿವಾರದ ಕಾರ್ಯಕರ್ತರ ಕೊಲೆ ಆಗಿದೆ. ಆದರೆ, ಇದವರೆಗೂ ರಾಜ್ಯ ಸರ್ಕಾರ ಒಂದು ಪ್ರಕರಣವನ್ನೂ ಭೇದಿಸಿಲ್ಲ. ಆದರೆ ಈಗ ಪರೇಶ್ ಮೇಸ್ತಾ ಸಾವು ಪ್ರಕರಣದ ತನಿಖೆಗ ಸೂಕ್ತ ರೀತಿಯಲ್ಲಿ ಆಗದಿದ್ದರೆ, ಇಡೀ "ಕರಾವಳಿ ಭಾಗ ಹೊತ್ತಿ ಉರಿಯಲಿದೆ" ಎಂದು ಬೆದರಿಕೆ ಹಾಕಿದ್ದಾರೆ.

ಐಜಿಪಿ ಸಿದ್ದರಾಮಯ್ಯ ಅವರ ಗುಲಾಮ: ಈಶ್ವರಪ್ಪ

ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ಐಜಿಪಿ ಹೇಮಂತ್ ನಿಬಾಂಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು  ಟೀಕಿಸಿದರು.

ಈ ಪ್ರಕರಣವನ್ನೂ ಮುಖ್ಯಮಂತ್ರಿ  ಸಿದ್ದರಾಮಯ್ಯ  ಅವರೇ ಮುಚ್ಚಿಹಾಕಲು ಹೊರಟಿದ್ದಾರೆ ಎಂದ ಈಶ್ವರಪ್ಪ, ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ ದಳಕ್ಕೆ ನೀಡುವಂತೆ ಒತ್ತಾಯಿಸಿದರು.

ಪರೇಶ್ ಮೇಸ್ತಾ ನಿಗೂಢ ಸಾವು ಸೇರಿದಂತೆ ರಾಜ್ಯದಲ್ಲಿ ನಡೆದ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯ ಮುಖಂಡರು ನಗರದಲ್ಲಿಂದು ವಿಧಾನಸೌಧದ ಬಳಿ ಡಾ.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ರಾಜಭವನಕ್ಕೆ ಮೆರವಣಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮೆರವಣಿಗೆಯಲ್ಲಿ ಸಂಸದ ಪಿ.ಸಿ.ಮೋಹನ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ, ಶಾಸಕರಾದ ಸುರೇಶ್ ಕುಮಾರ್, ಹೆಚ್.ವಿಶ್ವನಾಥ್, ನಾರಾಯಣಸ್ವಾಮಿ, ಅಶ್ವಥ್ ನಾರಾಯಣ ಸೇರಿ ಪ್ರಮುಖರು ಭಾಗವಹಿಸಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News