ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

Update: 2017-12-13 12:05 GMT

ಮಡಿಕೇರಿ,ಡಿ.13 : ಹೊನ್ನಾವರದಲ್ಲಿ ನಡೆದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತಾ ಅವರ ನಿಗೂಢ ಸಾವಿನ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಪ್ರಮುಖರು ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪರೇಶ್ ಮೇಸ್ತಾ ಅವರನ್ನು ದೇಶದ್ರೋಹಿಗಳು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. 

ಈ ಸಂದರ್ಭ ಮಾತನಾಡಿದ ವಿಶ್ವ ಹಿಂದೂ ಪರಿಷತ್‍ನ ಪ್ರಧಾನ ಕಾರ್ಯದರ್ಶಿ ನರಸಿಂಹ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಬಡ ಕುಟುಂಬಕ್ಕೆ ಸೇರಿದ ಮುಗ್ಧ ಯುವಕ ಪರೇಶ್‍ನನ್ನು ಕೊಲೆ ಮಾಡಲಾಗಿದ್ದು, ಪ್ರಕರಣವನ್ನು ಎನ್‍ಐಎ ತನಿಖೆಗೆ ಒಪ್ಪಿಸಬೇಕು, ಪೊಲೀಸ್ ಅಧಿಕಾರಿಗಳು ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯಲು ರಾಜ್ಯ ಗೃಹ ಕಾರ್ಯದರ್ಶಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾಧ್ಯಕ್ಷರಾದ ಟಾಟಾ ಬೋಪಯ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಶಾಲಪ್ಪ, ಬಜರಂಗದಳದ ಜಿಲ್ಲಾ ಸಂಚಾಲಕ ಅಜಿತ್, ಸಹ ಸಂಚಾಲಕ ಚೇತನ್, ದೇಶ ಪ್ರೇಮಿ ಯುವ ಸಂಘಟನೆಯ ಅಧ್ಯಕ್ಷರಾದ ಅರುಣ್ ಶೆಟ್ಟಿ, ಬಿಜೆಪಿ ಹಿರಿಯ ಮುಖಂಡ ಎಂ.ಬಿ.ದೇವಯ್ಯ, ಬಜರಂಗದಳದ ನಗರ ಸಂಚಲಕರಾದ ಚರಣ್, ಮನುಕುಮಾರ್, ನಂದಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಂತರ ಪ್ರತಿಭಟನಾಕಾರರು ಜಿಲ್ಲಾಡಳಿತದ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News