ಫಲಾನುಭವಿಗಳಿಗೆ ತ್ವರಿತವಾಗಿ ಪಡಿತರ ಚೀಟಿ ವಿತರಣೆ : ಯು.ಟಿ.ಖಾದರ್
ಬೆಳಗಾವಿ, ಡಿ.15: ಪಡಿತರ ಚೀಟಿಗಾಗಿ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಫಲಾನುಭವಿಗಳಿಗೆ ಪಡಿತರ ಚೀಟಿಗಳನ್ನು ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಸೂಚಿಸಿದ್ದಾರೆ.
ಶುಕ್ರವಾರ ನಗರದಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿಒಎಸ್ ವ್ಯವಸ್ಥೆ ಅಳವಡಿಸಿರುವ ಕೆಲವು ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಯಾಗುತ್ತಿದ್ದು ಅಂತಹ ಪ್ರದೇಶಗಳಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಬ್ರಾಡ್‌ಬ್ಯಾಂಡ್ ಸಂಸ್ಥೆಯವರೊಂದಿಗೆ ಮಾತನಾಡಿ ನೆಟ್‌ವರ್ಕ್ ವ್ಯವಸ್ಥೆ ಕಲ್ಪಿಸಿಕೊಡಬೇಕು. ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಅಡುಗೆ ಅನಿಲ (ಗ್ಯಾಸ್) ಹೊಂದಿರುವ ಪಡಿತರದಾರರಿಗೂ ಒಂದು ಲೀಟರ್ ಸೀಮೆಎಣ್ಣೆ ವಿತರಿಸಲಾಗುತ್ತಿದ್ದು, ಸೀಮೆಎಣ್ಣೆ ಬೇಕಾದ ಪಡಿತರದಾರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಬೆಲೆ ಅಂಗಡಿಯವರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಪಿಒಎಸ್ ವ್ಯವಸ್ಥೆ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರ ಹೆಬ್ಬಟ್ಟಿನ ಗುರುತಿನ ಜೊತೆಗೆ ಮೊಬೈಲ್ ಸಂಖ್ಯೆಯನ್ನು ಪಡೆಯಬೇಕು ಎಂದು ಖಾದರ್ ತಿಳಿಸಿದರು.
ಗೋಧಿ ದಾಸ್ತಾನು ಕಡಿಮೆಯಿರುವುದರಿಂದ ಗೋಧಿ ವಿತರಿಸಲು ಸಾಧ್ಯವಾಗುತ್ತಿಲ್ಲ. ಪಡಿತರದಾರರಿಗೆ ಗೋಧಿ ಬದಲು ತೊಗರಿ ಬೇಳೆ ಅಥವಾ ಇನ್ನಿತರ ಆಹಾರ ಪದಾರ್ಥಗಳನ್ನು ವಿತರಿಸಬೇಕು ಹಾಗೂ ಈ ಬಗ್ಗೆ ಪಡಿತರದಾರರಿಗೆ ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಯವರು ತಿಳಿಹೇಳಬೇಕು ಎಂದು ಅವರು ಹೇಳಿದರು.
ಕೆಲವು ಆಹಾರಧಾನ್ಯಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಕಡಿಮೆಗೊಳಿಸಲಾಗಿದ್ದು, ಅಂಗಡಿಗಳ ಮಾಲಕರು ಸೂಕ್ತ ಪ್ರಮಾಣದ ದರದೊಂದಿಗೆ ಆಹಾರಧಾನ್ಯಗಳನ್ನು ಮಾರಾಟ ಮಾಡಬೇಕು. ಹೆಚ್ಚಿನ ದರದಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಅಂಗಡಿಗಳು ಹಾಗೂ ಮಾರಾಟಗಾರರ ಮೇಲೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಖಾದರ್ ಸೂಚಿಸಿದರು.
ಆಹಾರ ಇಲಾಖೆಯ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಖಾದರ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಝಿಯಾವುಲ್ಲಾ, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು, ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.