ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನೆದುರಿಸಲು ಪ್ರಿಯಾಂಕ್ ಖರ್ಗೆ, ಡಾ.ಶರಣ ಪ್ರಕಾಶ್ ಸಾಕು: ಸಿದ್ದರಾಮಯ್ಯ
ಕಲಬುರ್ಗಿ, ಡಿ.16: ಹೈದರಾಬಾದ್-ಕರ್ನಾಟಕ ಭಾಗದ ಬಿಜೆಪಿ ನಾಯಕರನ್ನು ಎದುರಿಸಲು ನಾನು ಬರಬೇಕಿಲ್ಲ. ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಡಾ.ಶರಣ ಪ್ರಕಾಶ್ ಪಾಟೀಲ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರ್ಗಿಯ ಅಫಜಲಪುರ, ಸೇಡಂ ಹಾಗೂ ಜೇವರ್ಗಿಯಲ್ಲಿ ಸುಮಾರು 947 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ ನಾಯಕರ ಸವಾಲನ್ನು ಸಮರ್ಥವಾಗಿ ಎದುರಿಸಲು ನಮ್ಮ ಸಚಿವರು ಸಿದ್ಧರಿದ್ದಾರೆ ಎಂದರು.
ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರಲಿದ್ದು, ಬಿಜೆಪಿ ನಾಯಕರು ಕಾದು ನೋಡಬೇಕು. ತದ ನಂತರ ಗೊತ್ತಾಗಲಿದೆ ಎಂದರು.
ತೊಗರಿ ಬೆಳೆಗೆ 7,500 ರೂ. ಬೆಂಬಲ ಬೆಲೆ ನೀಡಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಈ. ಕುರಿತು ಸಚಿವ ಸಂಪುಟದ ಉಪಸಮಿತಿಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಲಿಂಗಾಯಿತ ಪ್ರತ್ಯೇಕ ಧರ್ಮದ ವಿಚಾರವಾಗಿ ಐದು ಲಿಂಗಾಯಿತ ಹಾಗೂ ವೀರಶೈವ ಸಂಘಟನೆಗಳು ಪ್ರತ್ಯೇಕವಾಗಿ ಮನವಿ ಪತ್ರ ನೀಡಿದ್ದಾರೆ. ಇದನ್ನು ಕೇಂದ್ರ ಅಲ್ಪಸಂಖ್ಯಾತ ಆಯೋಗಕ್ಕೆ ಕಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.