×
Ad

ನೋಂದಣಿ ಕಡ್ಡಾಯ

Update: 2017-12-16 22:13 IST

ಉಡುಪಿ, ಡಿ.16: ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು (ಶೆಲ್ಟರ್ ಹೋಮ್), ತೆರೆದ ತಂಗುತಾಣಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲ ಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು ( ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತು ಪಡೆಸಿ) ಎಲ್ಲಾ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲ ನ್ಯಾಯ (ಪಾಲನಾ ಮತ್ತು ರಕ್ಷಣೆ) ಕಾಯ್ದೆ 2015, ಸೆಕ್ಷನ್ 41 (1)ರನ್ವಯ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

ಈ ಬಗ್ಗೆ ಈಗಾಗಲೇ ಪತ್ರಿಕಾ ಪ್ರಕಟಣೆಗಳನ್ನು ನೀಡಿದ್ದರೂ, ಈ ಕಾಯ್ದೆಯಡಿ ನೋಂದಣಿಯಾಗದೇ, ಮಕ್ಕಳಿಗಾಗಿ ಸಂಸ್ಥೆಗಳನ್ನು ನಡೆಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಸರ್ವೋಚ್ಚ ನ್ಯಾಯಾಲಯವು ರಿಟ್ ಅರ್ಜಿ (ಕ್ರಿಮಿನಲ್) ಸಂಖ್ಯೆ:102,2007ಕ್ಕೆ ಸಂಬಂಧಪಟ್ಟಂತೆ ಈ ವರ್ಷದ ಮೇ 5ರಂದು ನೀಡಿರುವ ಆದೇಶದಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆ 2015 ರಡಿಯಲ್ಲಿ ಕಡ್ಡಾಯವಾಗಿ ಡಿ.31ರೊಳಗೆ ನೋಂದಣಿಗೊಳಿಸುವ ಕಾರ್ಯ ಮಾಡಬೇಕೆಂದು ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಸಲಾಗಿದೆ.

ಬಾಲ ನ್ಯಾಯ ಕಾಯ್ದೆ 2015ರ ಅಡಿಯಲ್ಲಿ ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರಕಾರೇತರ ಸ್ವಯಂ ಸೇವಾಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಬಾಲ ನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದ ಸಂಸ್ಥೆಗಳು ನೋಂದಣಿ ಅವಧಿ ಮುಗಿದಿದ್ದಲ್ಲಿ ಕೂಡಲೇ ನವೀಕರಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಇದಕ್ಕೆ ತಪ್ಪಿದ್ದಲ್ಲಿ ಸೆಕ್ಷನ್ 42(1)ರನ್ವಯ ಒಂದು ವರ್ಷದವರೆಗೆ ಹಾಗೂ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ.ಗೆ ಕಡಿಮೆ ಇಲ್ಲದಂತೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು. ನೋಂದಾಯಿಸಲು ತಡ ಮಾಡಿದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾದ ಎಂದು ಪರಿಗಣಿಸಲಾ ಗುವುದು. ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಗೊಂಡಿ ದ್ದರೂ, ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು.

ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News