×
Ad

ಸದಾಶಿವ ವರದಿ ಶಿಫಾರಸ್ಸಿಗೆ ಹೋರಾಟ ಸಮಿತಿ ರಚನೆ

Update: 2017-12-20 18:59 IST

ಬೆಂಗಳೂರು, ಡಿ.20: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಶಿಫಾರಸ್ಸಿಗೆ ಅಗತ್ಯ ರೂಪುರೇಷೆ ಸಿದ್ಧಪಡಿಸಲು ಹೋರಾಟ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಪದಾಧಿಕಾರಿಗಳಾಗಿ 33 ಉಪ ಜಾತಿಯ ಮುಖಂಡರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಹಿರಿಯೂರಿನ ಆದಿಜಾಂಬವ ಮಠದ ಪೀಠಾಧ್ಯಕ್ಷ ಮಾರ್ಕಾಂಡಮುನಿ ಸ್ವಾಮೀಜಿ, ಪರಿಶಿಷ್ಟ ಜಾತಿ ಮೀಸಲಾತಿ ಹಂಚಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನೇತೃತ್ವದ ಸರಕಾರ ನ್ಯಾ.ಎ.ಜೆ.ಸದಾಶಿವ ಆಯೋಗ ರಚನೆ ಮಾಡಿತು.

ಈ ಆಯೋಗವು ಪರಿಶಿಷ್ಟ ಜಾತಿಯೊಳಗೆ ಇರುವಂತಹ 11 ಜಾತಿಗಳಿಗೆ ಇದುವರೆಗೂ ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಲಭ್ಯವಾಗಿರುವ ಮೀಸಲಾತಿ ಪ್ರಮಾಣ, ಜನಸಂಖ್ಯೆ ಸೇರಿ ಇನ್ನಿತರೆ ಅಂಶಗಳನ್ನು ಒಳಗೊಂಡಂತೆ, ವರದಿಯನ್ನು 2012ರಲ್ಲಿ ಸರಕಾರಕ್ಕೆ ಸಲ್ಲಿಸಿತ್ತು. ಆದರೆ, ಇದುವರೆಗೂ ರಾಜ್ಯ ಸರಕಾರ ಈ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಮಾರಸಂದ್ರ ಮುನಿಯಪ್ಪ ಮಾತನಾಡಿ, ಸದಾಶಿವ ಆಯೋಗದ ವರದಿಯ ಬಗ್ಗೆ ಇರುವ ತಪ್ಪು ಗ್ರಹಿಕೆಗಳು, ಅನುಮಾನ, ಗೊಂದಲ ನಿವಾರಿಸಬೇಕು.101 ಜಾತಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಖಾಸಗಿ ಕ್ಷೇತ್ರದಲ್ಲಿ ಎಸ್ಸಿ-ಎಸ್ಟಿ ವರ್ಗಗಳಿಗೆ ಮೀಸಲಾತಿ ಪಡೆಯಲು, ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಹೋರಾಟ ಮುಂದುವರಿಸುವುದು ಎಂದ ಅವರು, ಡಿಸೆಂಬರ್ ಅಂತ್ಯದೊಳಗೆ ಸದಾಶಿವ ವರದಿಯನ್ನು ರಾಜ್ಯ ಸರಕಾರ ಅಂಗೀಕರಿಸದಿದ್ದಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

 ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಬಸವಮೂರ್ತಿ ಮಾದಾರ ಚನ್ನಯ್ಯ, ಷಡಕ್ಷರಮುನಿ ಸ್ವಾಮೀಜಿ, ಬಸವ ಹರಳ್ಯ ಸ್ವಾಮೀಜಿ ಸೇರಿ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News