ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳ: ಡಿ.ಎಸ್.ವೀರಯ್ಯ

Update: 2017-12-20 14:06 GMT

ಬೆಂಗಳೂರು, ಡಿ.20: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ ಆರೋಪಿಸಿದರು.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರಿದರು.

ಮಾತೆತ್ತಿದರೆ ಅಹಿಂದ ವರ್ಗಗಳ ಬಗ್ಗೆ ಮಾತನಾಡುವ ಸಿದ್ದರಾಮಯ್ಯ, ದಲಿತರ ವಿಚಾರದಲ್ಲಿ ಉಡಾಫೆ ಉತ್ತರಗಳನ್ನು ನೀಡುತ್ತಾರೆ. ವಿಜಯಪುರದಲ್ಲಿ ದಲಿತ ಸಮುದಾಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿ, ಕೊಲೆಯಾಗಿದೆ. ಮುಖ್ಯಮಂತ್ರಿ ಅದೇ ಜಿಲ್ಲೆಯಲ್ಲಿ ಇದ್ದರೂ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರದಲ್ಲಿದ್ದರೂ ದಲಿತ ಸಮುದಾಯದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಅವರ ಹೇಳಿಕೆಯಿಂದ ಸಾಕಷ್ಟು ಬದಲಾವಣೆಗಳು ಆಗುತ್ತಿದ್ದವು ಎಂದು ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರುತಿ ಹೇಳಿದರು.

ರಾಜ್ಯದಲ್ಲಿ ಕಿಡಿಗೇಡಿಗಳಿಗೆ ಕಾನೂನಿನ ಭಯವಿಲ್ಲದಂತಾಗಿದೆ. ಮಹಿಳೆಯರು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಗೃಹ ಇಲಾಖೆ ಬದುಕಿದ್ದೆಯೋ, ಸತ್ತು ಹೋಗಿದ್ದೆಯೋ ಗೊತ್ತಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅತ್ಯಾಚಾರ ಹಾಗೂ ಕೊಲೆಗಳಂತಹ ಪ್ರಕರಣಗಳಲ್ಲಿ ಅಪರಾಧಿಗಳಿಗೆ ತಕ್ಷಣ ಶಿಕ್ಷೆಯಾಗಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಶ್ರುತಿ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News