×
Ad

ಅಮಾಸೆಬೈಲು ಅತ್ಯಾಚಾರ: ಅಪರಾಧಿಗೆ 12ವರ್ಷ ಕಠಿಣ ಶಿಕ್ಷೆ

Update: 2017-12-20 22:16 IST

ಕುಂದಾಪುರ, ಡಿ.20: ಏಳು ವರ್ಷಗಳ ಹಿಂದೆ ಅಮಾಸೆಬೈಲಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 12 ವರ್ಷಗಳ ಕಠಿಣ ಕಾರಾ ಗೃಹ ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ.

ಅಮಾಸೆಬೈಲಿನ ಸುರೇಶ್ ಪೂಜಾರಿ (26) ಶಿಕ್ಷೆಗೆ ಗುರಿಯಾದ ಅಪರಾಧಿ. ಬಾಲಕಿಯ ಸಹೋದರ ಸಂಬಂಧಿಯಾದ ಸುರೇಶ್ ಪೂಜಾರಿ 2011ರ ಆಗಸ್ಟ್ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿ, ಯಾರಿಗೂ ಹೇಳದಂತೆ ಕೊಲೆ ಬೆದರಿಕೆಯೊಡ್ಡಿದ್ದನು. ಇದರಿಂದ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ಮದನ್ ಗಾಂವ್ಕರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು 13 ಮಂದಿಯನ್ನು ಸಾಕ್ಷಿದಾರರನ್ನಾಗಿ ರಿಗಣಿಸಿ ಹೇಳಿಕೆ ಪಡೆದುಕೊಂಡಿತ್ತು.

ಆರೋಪಿಯ ಮೇಲಿನ ಆರೋಪ ಸಾಬೀತಾಗಿರುವುದಾಗಿ ಅಭಿಪ್ರಾಯ ಪಟ್ಟ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ, ಸುರೇಶ್ ಪೂಜಾರಿಗೆ 12 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿದರು.

ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಜೀವ ಬೆದರಿಕೆಯೊಡ್ಡಿದಕ್ಕೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಬಿ.ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಹರಿಶ್ಚಂದ್ರ ಉದ್ಯಾವರ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News