ಸಚಿವರು-ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ
ಮಂಗಳೂರು, ಡಿ.21: ವಾಮಂಜೂರು ಜಂಕ್ಷನ್‌ನಿಂದ ಪಿಲಿಕುಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಮರೀಕಣರ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಲಾಯಿತು.
ಸುಮಾರು 4.95 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರಿಟೀಕರಣ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಯೋಜನೆ, ಸಾಂಖ್ಯಿಕ, ವಿಜ್ಞಾನ, ತಂತ್ರಜ್ಞಾನ ಸಚಿವ ಸಚಿವ ಎಂ.ಆರ್. ಸೀತಾರಾಮ್ ಶಿಲಾನ್ಯಾಸಗೈದರು.
ಈ ಸಂದರ್ಭ ಶಾಸಕರಾದ ಜೆ.ಆರ್.ಲೋಬೊ, ಬಿ.ಎ.ಮೊಯ್ದಿನ್ ಬಾವಾ, ಮೇಯರ್ ಕವಿತಾ ಸನಿಲ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಜಿಪಂ ಸದಸ್ಯ ಇಬ್ರಾಹೀಂ ಅಡ್ಡೂರು, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ. ಸುಧೀರ್, ಬಜ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.
ಸ್ಥಳೀಯ ಕಾರ್ಪೊರೇಟರ್ ಮತ್ತು ಗ್ರಾಪಂ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಚಿವರು ಮತ್ತು ಶಾಸಕರಿಗೆ ಕಪ್ಪುಬಾವುಟ ಪ್ರದರ್ಶಿಸಿದ ಘಟನೆ ಕೂಡ ಈ ಸಂದರ್ಭ ನಡೆಯಿತು. ತಕ್ಷಣ ಪೊಲೀಸರು ಮಧ್ಯೆ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದರು.
ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ಹೊಯ್‌ಕೈ-ಮಾತಿನ ಚಕಮಕಿ ಕೂಡ ನಡೆಯಿತು. ಬಿಜೆಪಿಯ ಒಬ್ಬ ಕಾರ್ಯಕರ್ತನಿಗೆ ಪೊಲೀಸ್ ಸಿಬ್ಬಂದಿ ಏಟು ಬಿಗಿದರು ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತ ಕೂಡ ಪೊಲೀಸ್ ಸಿಬ್ಬಂದಿಗೆ ತಿರುಗೇಟು ನೀಡಿದರು ಎನ್ನಲಾಗಿದೆ. ಒಟ್ಟಿನಲ್ಲಿ ಹಿರಿಯ ಸಚಿವರೊಬ್ಬರ ಸಮ್ಮುಖ ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮೇಳೈಸಿತು.