ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಗೂಂಡಾ ಕಾಯ್ದೆಯಡಿ ಆರೋಪಿಗಳ ಬಂಧನಕ್ಕೆ ಬಿಜೆಪಿ ಒತ್ತಾಯ

Update: 2017-12-22 13:03 GMT

ಬೆಂಗಳೂರು, ಡಿ.22: ವಿಜಯಪುರದಲ್ಲಿ ದಾನಮ್ಮಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಸಂಬಂಧ ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಶುಕ್ರವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಂಗಳೂರು ನಗರ ಜಿಲ್ಲಾ ಬಿಜೆಪಿ ವತಿಯಿಂದ ದಾನಮ್ಮಳ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಕೂಡಲೆ ಬಂಧಿಸಿ ಜೈಲಿಗೆ ಕಳುಹಿಸಬೇಕೆಂದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾನಮ್ಮ ಮತ್ತು ಅವರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ರಾಜ್ಯದೆಲ್ಲೆಡೆ ಬಿಜೆಪಿ ಹೋರಾಟ ನಡೆಸಲಿದೆ. ಈ ಪ್ರಕರಣ ಹಾಡು ಹಗಲೇ ನಡೆದಿರುವುದು ಇಡೀ ರಾಜ್ಯ ತಲೆತಗ್ಗಿಸುವ ವಿಚಾರವಾಗಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆ ಜಿಲ್ಲೆಯಲ್ಲಿ ಇದ್ದಾಗಲೇ ದಾನಮ್ಮಳ ಪ್ರಕರಣ ನಡೆಯುತ್ತದೆ ಎಂದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಗೃಹ ಇಲಾಖೆ ಬದುಕಿದೆಯೇ ಎಂದು ಜನರು ಕೇಳುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನಿರಂತರವಾಗಿ ಹತ್ಯೆಗಳು ನಡೆಯುತ್ತಿವೆ. ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆಯಾಗಿ ತಿಂಗಳುಗಳೇ ಕಳೆದರೂ ಒಂದೇ ಒಂದು ಸುಳಿವೂ ಸಿಗುತ್ತಿಲ್ಲ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸಾಕ್ಷಿ ಸಿಕ್ಕಿದೆ, ನಾಳೆ ತಿಳಿಸುತ್ತೇವೆ ಎಂದು ಹೇಳುತ್ತಲೇ ಬರುತ್ತಿದ್ದಾರೆ. ಈ ನಾಳೆ ಎನ್ನುವ ಬೋರ್ಡ್‌ನ್ನು ವಿಧಾನಸೌಧಕ್ಕೆ ಹಾಕುವುದು ಒಳ್ಳೆಯದು ಎಂದು ವ್ಯಂಗ್ಯವಾಡಿದರು.

ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ, ಬಿಜೆಪಿ ಎಸ್.ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್, ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಶಾರದಾ ನಾಯಕ, ಯುವ ಮೋರ್ಚಾದ ಅಧ್ಯಕ್ಷ ಸಪ್ತಗಿರಿ ಸೇರಿ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News