ಕಾಂಗ್ರೆಸ್ ಪಕ್ಷವು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ: ಆರ್.ಅಶೋಕ್
ಬೆಂಗಳೂರು, ಡಿ.26: ಮಹಾದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ದೂರಿದರು.
ಮಂಗಳವಾರ ನಗರದ ಡಾಲರ್ಸ್‌ಕಾಲನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿವಾಸದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕೋರ್ ಕಮಿಟಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ಮಹಾದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೆ ಕೆಲಸವನ್ನು ಮಾಡಿಲ್ಲ. ಈಗ ರಾಜ್ಯದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಅಧಿಕಾರದಲ್ಲಿದ್ದರೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.
ಆದರೆ, ಬಿಜೆಪಿ ಮಾತ್ರ ಮಹಾದಾಯಿ ಸಮಸ್ಯೆಯನ್ನು ಬಗೆಹರಿಸಲು ಗೋವಾ ರಾಜ್ಯದ ಮುಖ್ಯಮಂತ್ರಿಯೊಂದಿಗೆ ಪತ್ರ ವ್ಯವಹಾರ ಮಾಡುತ್ತಿದೆ. ಇದನ್ನು ಸಹಿಸದೆ ಕಾಂಗ್ರೆಸ್‌ನವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಶೋಕ್ ಹೇಳಿದರು.
ಬಿಜೆಪಿ ಕಚೇರಿ ಎದುರು ಅನುಮತಿ ಇಲ್ಲದೆ ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ನಾಯಕರು ಊಟ-ತಿಂಡಿ ಪೂರೈಕೆ ಮಾಡುತ್ತಿರುವುದು ನೋಡಿದರೆ ಇದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ತಿಳಿಸಿದರು.
ಮಹಾದಾಯಿ ಹೋರಾಟಕ್ಕೂ, ನಮ್ಮ ಪಕ್ಷದ ಕೋರ್ ಕಮಿಟಿ ಸಭೆ ಸ್ಥಳಾಂತರ ಮಾಡಿರುವುದಕ್ಕೂ ಯಾವುದೆ ಸಂಬಂಧವಿಲ್ಲ. ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಜನರ ಕಣ್ಣಿಗೆ ಮಣ್ಣೆರೆಚುವ ಪ್ರಯತ್ನ ಮಾಡುತ್ತಿದೆ ಎಂದು ಅಶೋಕ್ ಆರೋಪಿಸಿದರು.
"ಜಾತ್ಯತೀತರು ಯಾರು ಅಂತ ಗೊತ್ತಿಲ್ಲ"
ಸಂವಿಧಾನ ಬದಲಾವಣೆಗೆ ನಮ್ಮ ಸ್ಪಷ್ಟ ವಿರೋಧವಿದೆ. ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ನೀಡಿರುವ ಹೇಳಿಕೆ ಕುರಿತು ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಜಾತ್ಯತೀತರು ಯಾರು ಅಂತ ನನಗೂ ಗೊತ್ತಿಲ್ಲ. ನಮ್ಮ ದೇಶದಲ್ಲಿ ಜಾತ್ಯತೀತರು ಅನ್ನೋ ಪದಕ್ಕೆ ಅರ್ಥವೇ ಇಲ್ಲ. ಯಾರು ಬೇಕಾದರೂ ತಮ್ಮನ್ನು ಜಾತ್ಯತೀತರು ಎಂದು ಬಿಂಬಿಸಿಕೊಳ್ಳುತ್ತಾರೆ.
-ಆರ್.ಅಶೋಕ್, ಮಾಜಿ ಡಿಸಿಎಂ