ಮಹಾದಾಯಿ ವಿವಾದ ನಿಭಾಯಿಸುವಲ್ಲಿ ವಿಫಲ: ರಾಜ್ಯ ಬಿಜೆಪಿ ನಾಯಕರ ಬಗ್ಗೆ ಅಮಿತ್ ಶಾ ಅಸಮಾಧಾನ?
ಬೆಂಗಳೂರು, ಡಿ.26: ಅತ್ಯಂತ ಸೂಕ್ಷ್ಮವಿಚಾರವಾಗಿರುವ ಮಹಾದಾಯಿ ನದಿ ನೀರು ಹಂಚಿಕೆ ವಿವಾದವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ರಾಜ್ಯ ಬಿಜೆಪಿ ನಾಯಕರು ವಿಫಲವಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಹ ಉಸ್ತುವಾರಿ ಪಿಯೂಷ್ ಗೋಯಲ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರುಳೀಧರ್‌ರಾವ್, ಕೇಂದ್ರ ಸಚಿವರಾದ ಅನಂತ್‌ಕುಮಾರ್, ಡಿ.ವಿ. ಸದಾನಂದಗೌಡ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಅಮಿತ್ ಶಾ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.
ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮಹಾದಾಯಿ ನದಿ ನೀರು ಹಂಚಿಕೆ ವಿವಾದವನ್ನು ಅತ್ಯಂತ ಎಚ್ಚರಿಕೆಯಿಂದ ನಿಭಾಯಿಸಬೇಕಿತ್ತು. ಆದರೆ, ಕಳೆದ ನಾಲ್ಕು ದಿನಗಳಿಂದ ರೈತರು ಬಿಜೆಪಿ ಕಚೇರಿ ಎದುರು ಅಹೋರಾತ್ರಿ ಧರಣಿ ಮಾಡುತ್ತಿದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ನೀವು ವಿಫಲವಾಗಿದ್ದೀರಾ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.
ಗೋವಾದಲ್ಲಿ ಮಿತ್ರ ಪಕ್ಷಗಳ ನೆರವಿನೊಂದಿಗೆ ಸರಕಾರ ರಚನೆ ಮಾಡಿದ್ದೇವೆ. ಆದರೂ, ನನ್ನ ಆಹ್ವಾನಕ್ಕೆ ಗೌರವ ಕೊಟ್ಟು ಮನೋಹರ್ ಪಾರಿಕ್ಕರ್ ಖುದ್ದು ದಿಲ್ಲಿಗೆ ಬಂದು ಸಭೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ಪರಿಸ್ಥಿತಿಯನ್ನು ಅತ್ಯಂತ ಚಾಣಾಕ್ಷತೆಯಿಂದ ನಿಭಾಯಿಸುತ್ತಿದ್ದಾರೆ. ಆದರೆ, ನೀವುಗಳು ಇರುವ ಅವಕಾಶವನ್ನು ಕೈ ಚೆಲ್ಲುತ್ತಿದ್ದೀರಾ ಎಂದು ನಾಯಕರನ್ನು ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ನಮ್ಮ ವಿರೋಧಿ ಪಕ್ಷಗಳು ಇದೇ ಅಸ್ತ್ರವನ್ನು ಬಳಸಿಕೊಂಡು ಜನರನ್ನು ನಮ್ಮ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಾಜ್ಯಾದ್ಯಂತ ಈ ಬೆಳವಣಿಗೆಯಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಇದರಿಂದಾಗಿ, ಪಕ್ಷಕ್ಕೆ ಆಗಿರುವ ಹಿನ್ನಡೆಯನ್ನು ಸರಿಪಡಿಸುವ ಜವಾಬ್ದಾರಿಗಳು ನಿಮ್ಮ ಮೇಲಿದೆ ಎಂದು ಅವರು ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.