ಮಹಾದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ: ಎಸ್.ಆರ್.ಪಾಟೀಲ್

Update: 2017-12-27 18:29 GMT

ಬೆಂಗಳೂರು, ಡಿ.27: ಮಹಾದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಲು ಒಕ್ಕೂಟ ವ್ಯವಸ್ಥೆಯ ಮುಖ್ಯಸ್ಥರಾಗಿರುವ ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿಕೊಳ್ಳುವುದು ಅಗತ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಆಗ್ರಹಿಸಿದರು.

ಬುಧವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಮಹಾದಾಯಿ ವಿಚಾರದಲ್ಲಿ ರಾಜಕೀಯ ಗಿಮಿಕ್ ಮಾಡಿದರೆ, ನಮ್ಮ ಪಾಲಿನ ನೀರು ಸಿಗುವುದಿಲ್ಲ ಎಂದರು.

ಬಿಜೆಪಿಯ 17 ಜನ ಸಂಸದರನ್ನು ರಾಜ್ಯದ ಜನತೆ ಆಯ್ಕೆ ಮಾಡಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೇಲೆ ಒತ್ತಡ ಹೇರಿ, ಮಹಾರಾಷ್ಟ್ರ, ಗೋವಾ ಹಾಗೂ ನಮ್ಮ ರಾಜ್ಯದ ಮುಖ್ಯಮಂತ್ರಿಯನ್ನು ಕರೆದು ಸಭೆ ಕರೆಯುವಂತೆ ಮನವೊಲಿಸಬೇಕು. ಅದನ್ನು ಬಿಟ್ಟು ನಮ್ಮ ಕಚೇರಿಗೆ ಮುತ್ತಿಗೆ ಹಾಕುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬರೆದ ಪತ್ರಕ್ಕೆ ತಕ್ಷಣ ಪ್ರತ್ಯುತ್ತರ ನೀಡಿರುವ ಗೋವಾ ಮುಖ್ಯಮಂತ್ರಿ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದ ಪತ್ರಗಳಿಗೆ ಮಾತ್ರ ಉತ್ತರಿಸುವುದಿಲ್ಲ. ನ್ಯಾಯಾಧೀಕರಣದ ಹೊರಗೆ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಸಿಗುತ್ತಿದ್ದಂತೆ ಸಿದ್ದರಾಮಯ್ಯ, ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಭೆ ಆಯೋಜಿಸುವಂತೆ ಮನವಿ ಮಾಡಿದ್ದರು ಎಂದು ಅವರು ಹೇಳಿದರು.

ಅಲ್ಲದೆ, ಸರ್ವಪಕ್ಷಗಳ ಮುಖಂಡರ ಸಭೆ ಕರೆದು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ನಡೆಯುವಂತಹ ಸಭೆಯಲ್ಲಿ ರಾಜ್ಯದ ನಿಲುವು ಏನಿರಬೇಕು ಎಂಬುದರ ಕುರಿತು ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಆದರೆ, ಮಹಾದಾಯಿ ವಿಚಾರದಲ್ಲಿ ಬಿಜೆಪಿ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದರಿಂದ ಇಷ್ಟು ಸಮಸ್ಯೆಗಳು ಉಂಟಾಗುತ್ತಿವೆ ಎಂದು ಎಸ್.ಆರ್.ಪಾಟೀಲ್ ಹೇಳಿದರು.

ಮಹಾದಾಯಿ ವಿವಾದವು ಪ್ರಾಮಾಣಿಕವಾಗಿ ಬಗೆಹರಿಯಬೇಕಿದೆ. ಆದರೆ, ನನ್ನ ಸಾರ್ವಜನಿಕ ಜೀವನದಲ್ಲಿ ಎಂದು ಕಾಣದೆ ಇರುವಂತಹ ಘಟನೆಯನ್ನು ಇಂದು ನೋಡುವಂತಾಯಿತು. ಬಿಜೆಪಿಯವರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದಾರೆ. ಕಾಂಗ್ರೆಸ್‌ನವರು ಎಂದಿಗೂ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಕಚೇರಿ ಎದುರು ನಮ್ಮ ಭಾಗದ ರೈತರು ಬಂದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅವರಿಗೆ ನೈತಿಕ ಸ್ಥೈರ್ಯ ತುಂಬಲು ನಾವು ಹೋಗಿದ್ದೆವು. ಆದರೆ, ಈಗ ಈ ವಿವಾದಕ್ಕೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಪ್ರಧಾನಿ ಮಧ್ಯಸ್ಥಿಕೆ ವಹಿಸದಿದ್ದರೆ ಈ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಾಗುವುದಿಲ್ಲ ಎಂದು ಎಸ್.ಆರ್.ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News