ಮಹಾದಾಯಿ ನದಿ ನೀರು ಹಂಚಿಕೆ ವಿವಾದ: ಕಾಂಗ್ರೆಸ್‌ಗೆ ತಿರುಗೇಟು ನೀಡಲು ಬಿಜೆಪಿ ಸಿದ್ಧತೆ
ಬೆಂಗಳೂರು, ಡಿ.28: ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಹಾದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ತಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಲು ಪ್ರತಿಪಕ್ಷ ಬಿಜೆಪಿ ಸಿದ್ಧತೆ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭವು ಜ.28ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲೆ ಮಹಾದಾಯಿ ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೂಲಕ ಮಹತ್ವದ ಹೇಳಿಕೆ ಕೊಡಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.
ಈ ಸಮಾರೋಪ ಸಮಾರಂಭಕ್ಕೆ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗುತ್ತಿದ್ದು, ಇವರ ಸಮ್ಮುಖದಲ್ಲೆ ಮಹಾದಾಯಿ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಕುರಿತು ಪ್ರಧಾನಮಂತ್ರಿ ಭರವಸೆ ನೀಡುವ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಡಿ.31ರಂದು ಬೆಂಗಳೂರಿಗೆ ಆಗಮಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚಿಸಲಿದ್ದಾರೆ. ಅಲ್ಲದೆ, ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್, ಯಡಿಯೂರಪ್ಪಗೆ ಮಹಾದಾಯಿ ಕುರಿತು ಪತ್ರ ಬರೆದ ನಂತರ ನಡೆದಿರುವ ಬೆಳವಣಿಗೆಗಳ ಕುರಿತು ಮುಖಂಡರಿಂದ ಮಾಹಿತಿ ಕಲೆ ಹಾಕಲಿದ್ದಾರೆ.
ಅಮಿತ್ ಶಾ ಜತೆ ನಡೆಯಲಿರುವ ಸಭೆಯಲ್ಲಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಹ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ಸಚಿವರಾದ ಅನಂತ್‌ಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ ಸೇರಿದಂತೆ ಎಲ್ಲ ಪ್ರಮುಖ ನಾಯಕರು ಪಾಲ್ಗೊಂಡು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಮುಖವಾಗಿ ಮಹಾದಾಯಿ ವಿವಾದ ಬಗೆಹರಿಸದಿದ್ದರೆ ಪಕ್ಷಕ್ಕೆ ಆಗುವ ಹಿನ್ನಡೆ, ರೈತರ ಪ್ರತಿಭಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಈ ಸಭೆಯಲ್ಲಿ ಚರ್ಚಿಸಲ್ಪಡುವ ವಿಷಯಗಳ ಸಂಪೂರ್ಣ ಮಾಹಿತಿಯನ್ನು ಅಮಿತ್ ಶಾ, ಪ್ರಧಾನಿಗೆ ತಲುಪಿಸಲಿದ್ದಾರೆ. ಅದರ ಆಧಾರದ ಮೇಲೆ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ನರೇಂದ್ರಮೋದಿ ಮಹಾದಾಯಿ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.