ಡಿ.30 ರಂದು ಬೆಂಗಳೂರಿಗೆ ರಾಮನಾಥ ಕೋವಿಂದ್
ಬೆಂಗಳೂರು, ಡಿ.28: ಬಿಡದಿಯಲ್ಲಿರುವ ಬಿವಿವಿ ಸಂಘದ ಅಮೃತಾ ಎಂಜಿನಿಯರಿಂಗ್ ಕಾಲೇಜಿನ ನೂತನ ಕ್ಯಾಂಪಸ್ ಅನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಡಿ.30 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಹಾಗೂ ಸಂಸ್ಥೆಯ 111 ನೆ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡುವರು ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಆರಂಭವಾಗಿ 111 ವರ್ಷಗಳು ಕಳೆಯುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನೂತನ ಕಾಲೇಜು ಆರಂಭ ಮಾಡುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ಅನಂತ್‌ಕುಮಾರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಸ್ಥೆಯ 111 ನೆ ವರ್ಷಾಚರಣೆ ಅಂಗವಾಗಿ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ, ಫಿಜಿಯೋಥೆರಪಿ ವೈದ್ಯಕೀಯ ಮಹಾ ವಿದ್ಯಾಲಯ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸ್ವತಂತ್ರವಾದ ಸೂಪರ್ ಸ್ಪೆಷಾಲಿಟಿ ವಿಭಾಗವನ್ನು ಆರಂಭ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ 1111 ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ, 1111 ಸಾಮಾನ್ಯ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ, 1111 ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.