ಮಾನಸಿಕ ರೋಗ ತಡೆಗೆ ರಾಷ್ಟ್ರೀಯ ಆಂದೋಲನ ಅಗತ್ಯ : ರಾಷ್ಟ್ರಪತಿ ರಾಮನಾಥ್ ಕೋವಿಂದ್

Update: 2017-12-30 12:50 GMT

ಬೆಂಗಳೂರು, ಡಿ.30: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾನಸಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಆಂದೋಲನ ರೂಪಿಸಬೇಕಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ ವೈದ್ಯ ಸಮುದಾಯಕ್ಕೆ ಕರೆ ನೀಡಿದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯ 22ನೆ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಮಾನಸಿಕ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ. ಭಾರತದ ಒಟ್ಟು ಜನಸಂಖ್ಯೆಯ ಶೇ.10 ರಷ್ಟು ಮಂದಿ ಒಂದಲ್ಲಾ ಒಂದು ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಮಾನಸಿಕ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಪಣ ತೊಡಬೇಕು ಎಂದು ತಿಳಿಸಿದರು.

ಹೃದ್ರೋಗ, ಮಧುಮೇಹದಂತಹ ರೋಗಗಳಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಮಾನಸಿಕ ರೋಗಿಗಳ ಸಂಖ್ಯೆ ವೃದ್ಧಿಯಾಗುತ್ತಿದೆ. ಯುವ ಸಮುದಾಯದಲ್ಲಿ ಈ ಸಮಸ್ಯೆ ಮೂರು ಪಟ್ಟು ಹೆಚ್ಚಾಗಿದೆ. ಮಾನಸಿಕ ಕಾಯಿಲೆಗಳನ್ನು ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳಲ್ಲದೆ, ಯೋಗ, ಧ್ಯಾನ ಮತ್ತಿತರ ದೇಶೀಯ ಪದ್ಧತಿಗಳ ಮೂಲಕ ಪರಿಣಾಮಕಾರಿ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ನಿಮ್ಹಾನ್ಸ್ ಸಂಸ್ಥೆಯು ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಪ್ರತಿ ವರ್ಷ 7 ಲಕ್ಷ ಮಾನಸಿಕ ರೋಗಿಗಳು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಮಾನಸಿಕ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಕುರಿತ ಕಾರ್ಯಕ್ರಮಗಳನ್ನು ರೂಪಿಸಲು ಮಾರ್ಗದರ್ಶನ ನೀಡಬೇಕು ಎಂದು ಅವರು ವೈದ್ಯರಿಗೆ ಸೂಚಿಸಿದರು.

ಕೇಂದ್ರದ ಆರೋಗ್ಯ ಸಚಿವ ಜೆ.ಪಿ.ನಡ್ಡ ಮಾತನಾಡಿ, ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ 2014ರಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ನೀತಿಯನ್ನು ದೇಶದಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಯಿತು. ಅದಾದ ಬಳಿಕ 2017ರಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸಾ ಕಾಯ್ದೆಯನ್ನು ಜಾರಿಗೆ ತಂದು ಈ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ನಿಮ್ಹಾನ್ಸ್ ಹೊಸದಾಗಿ ನಿರ್ಮಿಸಲಿರುವ ನಾರ್ಥ್‌ಬ್ಲಾಕ್ ಟ್ರಾಮಾ ಸೆಂಟರ್‌ಗೆ ಅಗತ್ಯವಿರುವ ಆರ್ಥಿಕ ನೆರವನ್ನು ನೀಡಲಾಗುವುದು. ದೇಶಾದ್ಯಂತ ಜಿಲ್ಲಾ ಮಟ್ಟದಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಮೂಲಸೌಕರ್ಯ ಹಾಗೂ ವೈದ್ಯರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಅವರು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಿಮ್ಹಾನ್ಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ವರ್ಮಾ ಅತ್ಯಾಧುನಿಕ ಚಿಕಿತ್ಸಾ ಕೇಂದ್ರ ಮತ್ತು ವಿವಿಧ ಸೌಲಭ್ಯಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್, ನಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕ ಡಾ. ಬಿ.ಎನ್. ಗಂಗಾಧರ್, ಕುಲಸಚಿವ ಡಾ. ಕೆ. ಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸುಮಾರು 150 ಪದವೀ ಧರರಿಗೆ ವಿವಿ ಧ ಪ್ರಶಸ್ತಿ ಮತ್ತು ಡಾಕ್ಟರೆಟ್‌ಪದವಿಗಳನ್ನು ನೀಡಲಾಯಿತು.

ರಾಜ್ಯ ಸರಕಾರ ಮಾನಸಿಕ ರೋಗಿಗಳಿಗೆ ಉತ್ಕೃಷ್ಟ ಚಿಕಿತ್ಸೆ ನೀಡಲು ಒತ್ತು ನೀಡಿದ್ದು, ನಿಮ್ಹಾನ್ಸ್ ಸಂಸ್ಥೆ ತನ್ನ ಸೌಲಭ್ಯಗಳನ್ನು ವಿಸ್ತರಿಸಿಕೊಳ್ಳುವ ಸಲುವಾಗಿ ನಾರ್ಥ್ ಬ್ಲಾಕ್ ನಿರ್ಮಿಸಲು 40 ಎಕರೆಯನ್ನು ಮಂಜೂರು ಮಾಡಲಾಗಿದೆ. ಇದರ ಜೊತೆಗೆ ಮನೋಚೈತನ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಇದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
-ಶರಣಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News