ತೆಲಂಗಾಣಕ್ಕೆ ನೀರು ಬಿಡಲು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್

Update: 2018-01-04 12:24 GMT

ಬೆಂಗಳೂರು, ಜ.4: ತುಂಗಭದ್ರಾ ಜಲಾಶಯದಿಂದ ತೆಲಂಗಾಣಕ್ಕೆ 3.5 ಟಿಎಂಸಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಗುರುವಾರ ಹೈದರಾಬಾದ್‌ನಲ್ಲಿ ನಡೆದ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯಲ್ಲಿ ಈ ವಿಷಯ ತಿಳಿಸಿದ ಎಂ.ಬಿ.ಪಾಟೀಲ್, ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ನಿಗದಿತ ಪ್ರಮಾಣದ ನೀರು ಬಿಡಲು ಸಾಧ್ಯವಿಲ್ಲ. ಉಭಯ ರಾಜ್ಯಗಳ ನಡುವೆ ಹೊಂದಾಣಿಕೆ ಅಗತ್ಯ ಎಂದು ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಮಳೆಯ ಅಭಾವದಿಂದ ತುಂಗಭದ್ರಾ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗದೆ ನೀರಿನ ಕೊರತೆ ಉಂಟಾಗಿದೆ. ಬೇಸಿಗೆ ಹಂಗಾಮಿನಲ್ಲಿ ರೈತರ ಬೆಳೆಗಳಿಗೆ ನೀರು ಹರಿಸಬೇಕಾದ ಅನಿವಾರ್ಯತೆ ಇದೆ. ಕರ್ನಾಟಕ ರಾಜ್ಯಕ್ಕೆ ಹೋಲಿಸಿದರೆ ತೆಲಂಗಾಣದಲ್ಲಿ ಉತ್ತಮ ಮಳೆಯಾಗಿದ್ದು, ಅಲ್ಲಿನ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಸಾಕಾಗುವಷ್ಟು ಇದೆ ಎಂದು ಹೇಳಿದರು.

ನೀರಿನ ಸಂಕಷ್ಟ ಪರಿಸ್ಥಿತಿಯನ್ನು ಉಭಯ ರಾಜ್ಯಗಳು ಅರ್ಥ ಮಾಡಿಕೊಂಡು ಪರಸ್ಪರ ಹೊಂದಾಣಿಕೆ ಮೂಲಕ ಹೋಗಬೇಕು. ಎರಡು ವರ್ಷಗಳಿಂದಲೂ ಕುಡಿಯುವ ನೀರಿನ ಉದ್ದೇಶಕ್ಕೆ 1ಟಿಎಂಸಿ ನೀರನ್ನು ತೆಲಂಗಾಣಕ್ಕೆ ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News