×
Ad

ಬೆಂಗಳೂರು: ಸಾಧನಾ ಸಮಾವೇಶ ತಡೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Update: 2018-01-04 20:46 IST

ಬೆಂಗಳೂರು, ಜ.4: ಆಡಳಿತಾರೂಢ ರಾಜ್ಯ ಸರಕಾರ ನಡೆಸುತ್ತಿರುವ ಸಾಧನಾ ಸಮಾವೇಶ ತಡೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಹನುಮಂತನಗರದ ಕೀರ್ತಿವರ್ಧನ ಜೋಷಿ ಎಂಬವರು ಸಲ್ಲಿಸಿರುವ ಈ ಅರ್ಜಿ ಶುಕ್ರವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

ರಾಜ್ಯ ಸರಕಾರ ತನ್ನ ನಾಲ್ಕುವರೆ ವರ್ಷಗಳ ಸಾಧನೆಯ ಹೆಸರಿನಲ್ಲಿ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ವರ್ಷದ ಡಿ.13 ರಿಂದ ಸಮಾವೇಶ ನಡೆಸುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೊಕ್ಕಸದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುವುದು ಅರ್ಜಿದಾರರ ಆರೋಪ.

ಈಗಾಗಲೇ ಹಲವೆಡೆ ನಡೆದಿರುವ ಸಮಾವೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರಕಾರದ ಕಲ್ಯಾಣ ಕಾರ್ಯಕ್ರಮಗಳ ಹಾಗೂ ಸಾಧನೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ತಮ್ಮ ವಿರೋಧಿಗಳ ಟೀಕೆಗೆ ಈ ವೇದಿಕೆಗಳನ್ನು ಬಳಸಿಕೊಳ್ಳತೊಡಗಿದ್ದಾರೆ ಎಂದು ಆಕ್ಷೇಪಿಸಲಾಗಿದೆ.

ಸಿದ್ದರಾಮಯ್ಯ ಬೊಕ್ಕಸದ ಹಣವನ್ನು ತಮ್ಮ ಸ್ವಾರ್ಥ ಮತ್ತು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದು ಅಕ್ರಮ ಮತ್ತು ಕಾನೂನು ಬಾಹಿರ. ಹೀಗಾಗಿ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಸಾಧನಾ ಸಮಾವೇಶಕ್ಕೆ ಹಣ ಬಿಡುಗಡೆ ಮಾಡದಂತೆ ತಡೆ ನೀಡಬೇಕು ಎಂದು ಕೋರಲಾಗಿದೆ.
ಈಗಾಗಲೇ ಖರ್ಚು ಮಾಡಿರುವ ಹಣವನ್ನು ಸಿದ್ದರಾಮಯ್ಯ ಅವರಿಂದ ವಸೂಲು ಮಾಡಬೇಕು. ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ವಿಚಾರಣೆ ನಡೆಸಬೇಕು ಎಂದೂ ಕೀರ್ತಿವರ್ಧನ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News