ಬೆಂಗಳೂರು: ಯುವಕನ ಕೊಲೆ
ಬೆಂಗಳೂರು, ಜ.5: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನೊಬ್ಬನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಕರೆ ಮೂಲದ ಸತೀಶ್ ಕೊಲೆಯಾದ ಯುವಕನಾಗಿದ್ದು, ಬನ್ನೇರುಘಟ್ಟ ಸಮೀಪದ ಬಿಂಗಿಪುರದ ಖಾಸಗಿ ಕಂಪೆನಿಯೊಂದರ ಉದ್ಯೋಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಂಗಿಪುರದ ಬಳಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸತೀಶ್‌ನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಓಡಿದರೂ ಬಿಡದೆ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಹಳೆ ದ್ವೇಷದಿಂದ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಈತನ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ಬನ್ನೇರುಘಟ್ಟ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.