25ಕ್ಕೂ ಅಧಿಕ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ-ಶಕುಂತಳಾ ಶೆಟ್ಟಿ
ಪುತ್ತೂರು, ಜ. 5: ಜ.7ರಂದು ಮಧ್ಯಾಹ್ನ 1 ಗಂಟೆಗೆ ಪುತ್ತೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ತೂರು ವಿಧಾನ ಸಭಾ ಕ್ಷೇತ್ರದ ಸುಮಾರು 25ಕ್ಕೂ ಅಧಿಕ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.
ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳು, ರಾಜ್ಯದ ಅಭಿವೃದ್ಧಿ ಕೆಲಸಗಳು ಹಾಗೂ ಪುತ್ತೂರಿನ ನೂತನ ಬೇಡಿಕೆಗಳ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಲಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಶಕುಂತಳಾ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್, ಗೃಹ ಸಚಿವ ರಾಮಲಿಂಗಾ ರೆಡ್ಡಿ, ಗ್ರಾಮೀಣಾಭಿವೃದ್ಧಿ ಮತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್, ಕಾನೂನು ಮತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಟಿ.ಬಿ, ಜಯಚಂದ್ರ, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪೌರಾಡಳಿತ ಸಚಿವ ಈಶ್ವರ ಬಿ.ಖಂಡ್ರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ, ಬೆಳ್ತಂಗಡಿ ಶಾಸಕ ವಸಂತ ಬಂಗೇರ, ಮೂಡಬಿದ್ರೆ ಶಾಸಕ ಕೆ.ಅಭಯಚಂದ್ರ ಜೈನ್. ಮುಖ್ಯ ಸಚೇತಕ ಐವನ್ ಡಿಸೋಜ, ವಿಧಾನಪರಿಷತ್ ವಿರೋಧಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕ ಎಸ್.ಅಂಗಾರ, ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೊ, ಮಂಗಳೂರು ಉತ್ತರ ಶಾಸಕ ಬಿ.ಎ. ಮೊಯ್ದನ್ ಬಾವ, ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಚಾಮರಾಜ ನಗರ ಶಾಸಕ ಸಿ.ಪುಟ್ಟರಂಗ ಶೆಟ್ಟಿ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ್ ಚಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 6,500 ಮಂದಿಗೆ 94ಸಿ/ 94ಸಿಸಿ ಹಕ್ಕುಪತ್ರ ನೀಡಲಾಗಿದೆ. 4 ಸಾವಿರ ಕುಟುಂಬಗಳಿಗೆ ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಸ್ಥಳ ಮಂಜೂರು ಮಾಡಲಾಗಿದೆ. 700 ಗಂಗಾ ಕಲ್ಯಾಣ ಯೋಜನೆ, ಅನ್ನಭಾಗ್ಯ, ಸುಮಾರು 74 ವಾಹನ ನೀಡಿಕೆ ಸೇರಿದಂತೆ ಸುಮಾರು 15 ಸಾವಿರ ಮಂದಿಗೆ ವೈಯುಕ್ತಿಕ ಪ್ರಯೋಜನವನ್ನು ನೀಡಲಾಗಿದೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ಇಲ್ಲದಿದ್ದರೂ ಮುಖ್ಯಮಂತ್ರಿಯವರು ಸಾಲಮನ್ನಾ ಜಾರಿಗೊಳಿಸುವ ಮೂಲಕ ಲಕ್ಷಾಂತರ ಮಂದಿ ರೈತರಿಗೆ ಉಡುಗೊರೆ ನೀಡಿದ್ದಾರೆ. ಕಳೆದ ನಾಲ್ಕೂವರೆ ವರ್ಷದ ಅವಧಿಯಲ್ಲಿ ಯಾವುದೇ ಜಾತಿ ಮತ, ಧರ್ಮ, ಪಕ್ಷಗಳ ಭೇದ ನೋಡದೆ ಸೌಲಭ್ಯ ನೀಡುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಪುತ್ತೂರನ್ನು ಗ್ರಾಮಾಂತರ ಜಿಲ್ಲೆಯಾಗಿ ಘೋಷಣೆ, ಪುತ್ತೂರಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ಸ್ಥಾಪನೆ, ಹಿರೆಬಂಡಾಡಿ- ಬೆಳ್ಳಿಪ್ಪಾಡಿ ನಡುವೆ ರೂ.32 ಕೋಟಿ ವೆಚ್ಚದ ಕಿಂಡಿಅಣೆಕಟ್ಟು ಹಾಗೂ ಪೆರ್ನೆ ಬಿಳಿಯೂರು- ಬೆಳ್ತಂಗಡಿ ಸಂಪರ್ಕಿಸುವ ರು. 20ಕೋಟಿ ವೆಚ್ಚದ ಕಿಂಡಿಅಣೆಕಟ್ಟು ಮೂಲಕ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಟಾನ, ಕಾಮಜಾಲು- ಮಾಣಿಲ ನಡುವೆ ಕೇರಳ ಕರ್ನಾಟಕ ಸಂಪರ್ಕಿಸುವ ರೂ.12 ಕೋಟಿ ವೆಚ್ಚದ ಸೇತುವೆ ನಿರ್ಮಾಣ ಇಂತಹ ಹಲವು ಅಭಿವೃದ್ಧಿ ಕಾಮಗಾರಿಗಳ ಕನಸುಗಳಿದ್ದು, ಈ ಎಲ್ಲಾ ಕೆಲಸಗಳ ಬಗ್ಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಮಂಡನೆ ಮಾಡಲಿದ್ದೇನೆ ಎಂದು ತಿಳಿಸಿದರು.
ನೀವು ಬಿಜೆಪಿಗೆ ಹೋಗುತ್ತೀರಿ ಎಂಬ ಮಾಹಿತಿಯಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕಿ ಅವರು ನಾನು ಬಿಜೆಪಿಯಿಂದ ಹೊರಬಂದಾಗ ನನ್ನನ್ನು ಕರೆದು ಶಾಸಕಿಯನ್ನಾಗಿ ಮಾಡಿ ಸಂಸದೀಯ ಕಾರ್ಯದರ್ಶಿ ಜವಾಬ್ದಾರಿ ನೀಡಿರುವುದು ಕಾಂಗ್ರೆಸ್ ಪಕ್ಷ. ಇದನ್ನು ತೊರೆದು ಮತ್ತೆ ಬಿಜೆಪಿಗೆ ಹೋಗಲಾರೆ. ಯಾರೋ ಅವರ ರಾಜಕೀಯ ಲಾಭಕ್ಕಾಗಿ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಮುಂದಿನ ಬಾರಿಯೂ ತಾನು ಪಕ್ಷದ ವತಿಯಿಂದ ಸ್ಪರ್ಧಿಸುತ್ತೇನೆ ಎಂದರು.
ಸುದ್ದಿಗೋಷ್ಟಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಜಿಲ್ಲಾ ಕಾಂಗ್ರೆಸ್ ಮುಖಂಡ ರಮಾನಾಥ ವಿಟ್ಲ, ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ.ತೌಸೀಫ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ ಉಪಸ್ಥಿತರಿದ್ದರು.