ಕೇಂದ್ರ ಸರಕಾರ, ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಹೈಕೋರ್ಟ್ ತುರ್ತು ನೋಟಿಸ್
ಬೆಂಗಳೂರು, ಜ.5: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ಅಧ್ಯಯನಕ್ಕೆ ರಚನೆಯಾಗಿರುವ ತಜ್ಞರ ಸಮಿತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ, ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಶಿವಮೊಗ್ಗದ ಶಶಿಧರ್ ಶಾನಭೋಗ, ಬೆಂಗಳೂರು ನಗರದ ಎಂ.ಸತೀಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರ ಎಂ. ಸತೀಶ್ ಪರ ವಾದಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ಅಧ್ಯಯನಕ್ಕೆ ತಜ್ಞರ ಸಮಿತಿಯನ್ನು ರಚನೆ ಮಾಡಲು ರಾಜ್ಯ ಸರಕಾರಕ್ಕೆ ಅಧಿಕಾರ ಇಲ್ಲ. ಈ ತಜ್ಞರ ಸಮಿತಿಯನ್ನು ರಚನೆ ಮಾಡಿದ ಮೇಲೆ ವೀರಶೈವರು ಮತ್ತು ಲಿಂಗಾಯತರು ಹೊಡೆದಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಈ ಸಮಿತಿಯನ್ನು ತೆಗೆದು ಹಾಕಬೇಕೆಂದು ಪೀಠಕ್ಕೆ ತಿಳಿಸಿದರು.
ಶಶಿಧರ್ ಶಾನಭೋಗ ಪರ ವಾದಿಸಿದ ವಕೀಲ ಜಿ.ಆರ್.ಗುರುಮಠ ಅವರು, ರಾಜ್ಯ ಅಲ್ಪಸಂಖ್ಯಾತರ ಆಯೋಗ ರಚಿಸಿರುವ ತಜ್ಞರ ಸಮಿತಿಯಲ್ಲಿ ತಜ್ಞರೇ ಇಲ್ಲ. ಈ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇವಲ ರಾಜಕೀಯ ಉದ್ದೇಶಕ್ಕೆ ಮಾತ್ರ ಎಂದು ಪೀಠಕ್ಕೆ ತಿಳಿಸಿದರು. ತಕ್ಷಣ ಮಧ್ಯ ಪ್ರವೇಶಿಸಿದ ನ್ಯಾಯಾಲಯವು ತಜ್ಞರ ಸಮಿತಿಯಲ್ಲಿ ತಜ್ಞರೇ ಇಲ್ಲ ಎಂದು ನೀವು ಹೇಳಿದರೂ, ಅದರ ಬಗ್ಗೆ ಕಾನೂನು ಜ್ಞಾನ ಇದ್ದರೆ ಸಾಕು ಎಂದು ಅಭಿಪ್ರಾಯಪಟ್ಟಿತು.
ಸರಕಾರದ ಪರ ವಾದಿಸಿದ ಎಜಿ ಮಧುಸೂದನ ಆರ್. ನಾಯಕ್ , ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ತೀರ್ಮಾನ ಕೈಗೊಳ್ಳಲಿದೆ. ಆದರೆ, ರಾಜ್ಯ ಸರಕಾರ ಇದರ ಬಗ್ಗೆ ಕೇಂದ್ರ ಸರಕಾರಕ್ಕೆ ಬರೀ ಶಿಫಾರಸ್ಸು ಮಾಡುತ್ತದೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಪ್ರತಿ ವಾದ ಆಲಿಸಿದ ನ್ಯಾಯಪೀಠವು ಈ ಅರ್ಜಿಗೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ಅವಶ್ಯಕತೆ ಇದೆ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿತು.