ಕಳ್ಳ ಎತ್ತುಗಳಿಗೆ ಮೇವು ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Update: 2018-01-06 15:42 GMT

ಶಿವಮೊಗ್ಗ, ಜ. 6: ಬಿಜೆಪಿ ಮುಖಂಡರಾದ ಬಿ.ಎಸ್.ಯಡಿಯೂರಪ್ಪ ಕೆ.ಎಸ್.ಈಶ್ವರಪ್ಪ ವಿರುದ್ದ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 'ಕಳ್ಳ ಎತ್ತುಗಳಿಗೆ ಮೇವು ಹಾಕಬೇಡಿ' ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. 

ನಗರದ ನೆಹರೂ ಮೈದಾನದಲ್ಲಿ ಶನಿವಾರ ಸಂಜೆ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ ಉದ್ಘಾಟಿಸಿದ ನಂತರ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಈ ಇಬ್ಬರು ಮುಖಂಡರು ಅಧಿಕಾರದಲ್ಲಿದ್ದಾಗ ಶಿವಮೊಗ್ಗದ ಅಭಿವೃದ್ದಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಾಪ್ರಹಾರ ನಡೆಸಿದರು. 

ಯಡಿಯೂರಪ್ಪ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರು ನಾವೇ ಮುಖ್ಯಮಂತ್ರಿಯಾಗುತ್ತೆವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಅವರು ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ. ಅದು ಕನಸಿನ ಮಾತಾಗಿದೆ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಪರಿವರ್ತನಾ ಯಾತ್ರೆಯೂದ್ದಕ್ಕೂ ಸಿದ್ದರಾಮಯ್ಯರ ಭ್ರಷ್ಟಾಚಾರ ಬಿಚ್ಚಿಡುವುದಾಗಿ ಯಡಿಯೂರಪ್ಪ ಹೇಳಿದ್ದರು. ಆದರೆ ಅದೆಲ್ಲವೂ ಸುಳ್ಳು ಎಂಬುವುದು ಜನತೆಗೆ ಗೊತ್ತಾಗಿದೆ. ಬರೀ ಪುಂಗಿ ಊದಿದ್ದಷ್ಟೆ. ಬುಟ್ಟಿಯಲ್ಲಿ ಹಾವೇ ಇಲ್ಲವಾಗಿದೆ. ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡದ ಯಡಿಯೂರಪ್ಪ, ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದ್ದಾರೆ. ಜನರಿಗೆ ಬಿಪಿಎಲ್ ಕಾರ್ಡ್ ಕೂಡ ಕೊಡಲು ಇವರಿಂದ ಸಾಧ್ಯವಾಗಲಿಲ್ಲ. ಇವರ ಆಡಳಿತ ವೈಖರಿ ಏನೆಂಬುವುದು ಜನರಿಗೆ ಗೊತ್ತಿದೆ ಎಂದು ಹೇಳಿದರು. 

ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಕಾರಜೋಳ ಸೇರಿದಂತೆ ಬಿಜೆಪಿ ಮುಖಂಡರು ದಲಿತರ ಮನೆಯಲ್ಲಿ ತಿಂಡಿ, ಊಟಕ್ಕೆ ಹೋದರು. ಆದರೆ ಹೋಟೆಲ್‍ನಿಂದ ಊಟ, ತಿಂಡಿ ತರಿಸಿಕೊಂಡು ತಿಂದರು. ಇವರ ನಾಟಕ ಏನೆಂಬುವುದು ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು. 
ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಶ್ರೇಯೋಭಿವೃದ್ದಿಗೆ ಶ್ರಮಿಸಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕ ಯತ್ನ ನಡೆಸಿದೆ. ಪಾರದರ್ಶಕ ಆಡಳಿತ ನೀಡಿದೆ. ಮುಂಬರುವ ಚುನಾವಣೆಯಲ್ಲಿ ಅತೀ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿ, ಮತ್ತೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News