ಸಮುದಾಯಗಳ ಅಭಿವೃದ್ಧಿಗೆ ಸಂಘ-ಸಂಸ್ಥೆಗಳು ಸಕ್ರಿಯವಾಗಲಿ: ಡಾ.ನಿರ್ಮಲಾನಂದ ಸ್ವಾಮೀಜಿ

Update: 2018-01-07 15:04 GMT

ಬೆಂಗಳೂರು, ಜ.7: ರಾಜ್ಯದ ಎಲ್ಲ ಜಾತಿ ಸಮುದಾಯಗಳು ಸರ್ವತೋಮುಖವಾಗಿ ಅಭಿವೃದ್ಧಿಯಾಗಿಸುವ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳು ಮಹತ್ವದ ಪಾತ್ರವಹಿಸಬೇಕಾಗಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು.

ರವಿವಾರ ಮಲೆನಾಡು ಸಂಘ ಮತ್ತು ಮಲೆನಾಡು ಸ್ಪೋರ್ಟ್ಸ್ ಅಂಡ್ ಕಲ್ಚರಲ್ ರಿಕ್ರಿಯೇಷನ್ ಕ್ಲಬ್ ನಗರದ ಪುರಭವನದಲ್ಲಿ ಆಯೋಜಿಸಿದ್ದ ‘ಮಲೆನಾಡು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪರವಾಗಿ ಕೆಲಸ ಮಾಡುವ ಸಂಘ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಬೇಕು. ಆ ಮೂಲಕ ಸಾಮಾನ್ಯ ಜನತೆಗೆ ಬದುಕಿಗೆ ಆಸರೆಯಾಗಬೇಕು ಎಂದು ಆಶಿಸಿದರು.

ಬಡ ವರ್ಗದಲ್ಲಿರುವ ಯುವ ಜನತೆಗೆ ಹೆಚ್ಚಿನ ಅವಕಾಶ ಸಿಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಮಹತ್ತರವಾದುದ್ದನ್ನು ಸಾಧಿಸುವಂತಹ ಗುರಿಯನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಕಾರ, ಸೌಲಭ್ಯಗಳನ್ನು ನೀಡಲು ಮುಂದಾಗಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಈ ವೇಳೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ, ಮಲೆನಾಡು ಸಂಘದ ಅಧ್ಯಕ್ಷ ಜೆ.ಪಿ.ವಿರೇಶ್, ಕಸ್ಟಮ್ಸ್ ಅಧಿಕಾರಿ ಜೆ.ದರ್ಶನ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News