×
Ad

ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಸಾರಿಗೆ ವ್ಯವಸ್ಥೆ

Update: 2018-01-11 20:23 IST

ಬೆಂಗಳೂರು, ಜ. 11: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್ಸಾರ್ಟಿಸಿ) ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕೆ ಜ.12 ಮತ್ತು 13ರಿಂದ ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಸ್ಥಳಗಳಿಗೆ 300 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ರಾಜಪೇಟೆ, ಕುಶಾಲನಗರ, ಮಡಿಕೇರಿ ಹಾಗೂ ತಮಿಳುನಾಡು ಮತ್ತು ಆಂಧ್ರ, ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ರಿಯಾಯಿತಿ: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ/ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು.

ಜ.15ರಿಂದ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಪ್ರಯಾಣಿಕರ ಒತ್ತಡವನ್ನು ಆಧರಿಸಿ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News