ಸಂಘಪರಿವಾರದ ಕ್ರಿಮಿನಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಕಾಂಗ್ರೆಸ್ ಒತ್ತಾಯ

Update: 2018-01-12 11:43 GMT

ಮೂಡಿಗೆರೆ, ಜ.12: ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಂಘಪರಿವಾರ ನಿರಂತವಾಗಿ ನಡೆಸುತ್ತಿರುವ ಕ್ರಿಮಿನಲ್ ಚಟುವಟಿಕೆಗಳನ್ನು ಹತ್ತಿಕ್ಕುವ ಮೂಲಕ ಕಾನೂನು ಕ್ರಮ ಜರುಗಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಶುಕ್ರವಾರ ತಹಸಿಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಕಳೆದ ಆರು ತಿಂಗಳಿನಿಂದ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಂಘಪರಿವಾರದವರು ವಿಶೇಷವಾಗಿ ಬಜರಂಗದಳದವರ ಹೆಸರಿನಲ್ಲಿ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುವ ಮೂಲಕ ಅಶಾಂತಿ ಉಂಟು ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ತಮ್ಮ ನೇತೃತ್ವದಲ್ಲಿ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಕೂಡ ಸಂಘಪರಿವಾರದ ಶಾಂತಿಭಂಗ ಚಟುವಟಿಕೆ ದಿನೇ ದಿನೇ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಮೂಡಿಗೆರೆಯ ವಿಧ್ಯಾರ್ಥಿನಿ ಧನ್ಯಶ್ರೀ ಬಜರಂಗದಳದ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡರುಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆಯು ಅನಿಲ್ ಎಂಬಾತನನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಕಳೆದೊಂದು ತಿಂಗಳಲ್ಲಿ ದಾನಮ್ಮ ಕೊಲೆ ಪ್ರಕರಣ, ದೀಪಕ್ ಕುಮಾರ್ ಹತ್ಯೆ, ಬಶೀರ್ ಕೊಲೆ, ಸುಭ್ರಮಣ್ಯದಲ್ಲಿ ನಟ, ನಟಿಯರ ಮೇಲೆ ಹಲ್ಲೆ, ಪಿಲಿಕುಳ ನಿಸರ್ಗಧಾಮದಲ್ಲಿ ಯುವತಿಯರ ಮೇಲೆ ಹಲ್ಲೆ ಸೇರಿದಂತೆ ಹತ್ತಾರು ಕ್ರಿಮಿನಲ್ ಚಟುವಟಿಕೆಗಳಲ್ಲಿ ಬಜರಂಗದಳ ಹಾಗೂ ಸಂಘಪರಿವಾರದ ಕಾರ್ಯಕರ್ತರು ಹಾಗೂ ಮುಖಂಡರು ನೇರವಾಗಿ ಭಾಗಿಗಳಾಗಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಕೂಡಲೇ ಸೂಕ್ತ ಕ್ರಮ ತೆಗೆದುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಭಾಗಗಳಲ್ಲಿ ಅಶಾಂತಿಗೆ ಅವಕಾಶ ನೀಡದಂತೆ, ಜನರಿಗೆ ಸೂಕ್ತ ರಕ್ಷಣೆ ನೀಡಲು ಪೊಲೀಸ್ ಇಲಾಖೆ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಎಚ್.ಹೇಮಶೇಖರ್, ಎಂ.ಎಚ್.ಇಬ್ರಾಹಿಂ, ಸಂಪತ್ ಬಿಳಗುಳ, ಇರ್ಫಾನ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News