ಅನಂತ ಕುಮಾರ್ ಹೆಗಡೆ ವಿರುದ್ದ ಕಪ್ಪು ಬಾವುಟ ಪ್ರದರ್ಶನ : ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Update: 2018-01-12 12:20 GMT

ಶಿವಮೊಗ್ಗ, ಜ. 12: ಕೇಂದ್ರ ಕೌಶಲ್ಯಾಭಿವೃದ್ದಿ ಖಾತೆ ರಾಜ್ಯ ಸಚಿವ ಅನಂತ್ ಕುಮಾರ್ ಹೆಗಡೆಯವರ ವಿರುದ್ದ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದ ಘಟನೆ ಶಿವಮೊಗ್ಗ ನಗರದ ಹೊರವಲಯದಲ್ಲಿ ನಡೆಯಿತು.

ಸಾಗರ ರಸ್ತೆಯ ಗುಡ್ಡದ ಹರಕೆರೆ ಗ್ರಾಮದಲ್ಲಿರುವ ಪೆಸೆಟ್ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ಕಿಲ್ ವೀಲ್ಸ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಭಾಗಿಯಾಗಿದ್ದ ವೇಳೆ ಈ ಘಟನೆ ನಡೆಯಿತು. ತಲೆಗೆ ಕಪ್ಪು ಪಟ್ಟಿ ಧರಿಸಿ, ಸಚಿವರ ವಿರುದ್ದ ದಿಕ್ಕಾರದ ಘೋಷಣೆ ಕೂಗುತ್ತಾ ಮುತ್ತಿಗೆ ಹಾಕಲು ಮುಂದಾದ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದರು. 

ರಾಜೀನಾಮೆ ನೀಡಬೇಕು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಅನಂತಕುಮಾರ್ ಹೆಗಡೆಯವರು ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ. ಇಷ್ಟಬಂದ ಹಾಗೆ ಹೇಳಿಕೆ ನೀಡುತ್ತಿದ್ದಾರೆ. ಕೋಮು ಪ್ರಚೋದಕ ಮಾತುಗಳನ್ನಾಡುವ ಮೂಲಕ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.   

ಇತ್ತೀಚೆಗೆ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಸಂವಿಧಾನವನ್ನೇ ಬದಲಾಯಿಸುವುದಾಗಿ ಹೇಳಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದವಿರುವುದಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವರು ಇದೀಗ ಸಂವಿಧಾನವನ್ನೇ ಬದಲಾಯಿಸುವುದಾಗಿ ಹೇಳಿಕೆ ನೀಡುತ್ತಿರುವುದು ಅವರ ಸಂವಿಧಾನ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. 

ಪ್ರಗತಿಪರ, ಜಾತ್ಯತೀತ ವ್ಯಕ್ತಿಗಳ ಬಗ್ಗೆಯೂ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಸಚಿವರಾಗಿ ಹೇಗೆ ನಡೆದುಕೊಳ್ಳಬೇಕೆಂಬ ಸಭ್ಯತೆಯೇ ಗೊತ್ತಿಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಅನಂತಕುಮಾರ್ ಹೆಗಡೆಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಷ್ಟ್ರಪತಿಗಳು ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. 

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ.ಜೆ.ಮಧುಸೂದನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಿರಂಜೀವಿ ಬಾಬು, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ತಾಂಡ್ಲೆ, ಚಂದ್ರಶೇಖರ್, ಅಕ್ಬರ್, ಸುರೇಶ್, ಖಾದರ್, ಶಿವಕುಮಾರ್, ಗಿರೀಶ್, ಮಂಜು ಪುರಲೆ ಸೇರಿದಂತೆ ಮೊದಲಾದವರಿದ್ದರು. 

'ಪ್ರಧಾನಿ ಮೋದಿ ಮೌನವೇಕೆ?' : ಕಾರ್ಯಾಧ್ಯಕ್ಷ ಸಿ.ಜೆ.ಮಧುಸೂದನ್
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದುದು ಏಕೆ? ಇಲ್ಲಿಯವರೆಗೂ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸದಿರುವುದು ಏಕೆ? ಎಂದು ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ.ಜೆ.ಮಧುಸೂದನ್‍ರವರು ಪ್ರಶ್ನಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಪಕ್ಷವು ಶಾಂತಿ-ಸುವ್ಯವಸ್ಥೆ ಕದಡುವ ಹುನ್ನಾರ ನಡೆಸುತ್ತಿದೆ. ಈ ಕಾರಣಕ್ಕಾಗಿಯೇ ಆ ಪಕ್ಷದ ಕೆಲ ನಾಯಕರು ಕೋಮು ಪ್ರಚೋದಕ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುವ ಕೆಲಸ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News