ಉಡುಪಿ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಯತ್ನ: ಬಿಜೆಪಿ ಮುಖಂಡರ ಬಂಧನ

Update: 2018-01-13 08:08 GMT

ಉಡುಪಿ, ಜ.13: ಬಿಜೆಪಿ ಮತ್ತು ಸಂಘಪರಿವಾರವನ್ನು ಉಗ್ರವಾದಿಗಳೆಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾ ಧ್ಯಕ್ಷ ದಿನೇಶ್ ಗುಂಡೂರಾವ್ ಕ್ರಮವನ್ನು ಖಂಡಿಸಿ ಹಾಗೂ ಈ ಕುರಿತು ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಕಾಂಗ್ರೆಸ್ ಭವನದ ಸಮೀಪ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನವರಿಗೆ ಹಿಂದೂ ಧರ್ಮ ಏನು ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ಸಮಾಜ ಒಡೆಯುವ ಕೆಲಸ ಮಾಡಿದರೆ, ಸಂಘಪರಿವಾರ ಸಮಾಜ ಕಟ್ಟುವ ಕೆಲಸ ಮಾಡುತ್ತಿದೆ. ಕೃಷ್ಣ ಮಠಕ್ಕೆ ಭೇಟಿ ನೀಡದ ಮುಖ್ಯಮಂತ್ರಿಯಿಂದ ಹಿಂದೂ ಧರ್ಮದ ಕೈ ಕಟ್ಟಿ ಹಾಕಲು ಆಗಲ್ಲ ಎಂದು ಟೀಕಿಸಿದರು.

ನಂತರ ಬ್ರಹ್ಮಗಿರಿಯ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ನೇತೃತ್ವದಲ್ಲಿ ತಡೆದ ಪೊಲೀಸರು, ಎಲ್ಲ ಪ್ರತಿಭಟನಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷ ನಳಿನಿ ಪ್ರದೀಪ್ ರಾವ್, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಕುತ್ಯಾರು ನವೀನ ಶೆಟ್ಟಿ, ಶ್ರೀಶ ನಾಯಕ್, ಕುಯಿಲಾಡಿ ಸುರೇಶ್ ನಾಯಕ್, ನಯನ ಗಣೇಶ್, ಶ್ಯಾಮಲಾ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News