ಇಲಾಖೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಮುಹಮ್ಮದ್ ಮೊಹ್ಸಿನ್

Update: 2018-01-13 14:14 GMT

ಧಾರವಾಡ, ಜ.13: ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರವು ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ತಾಕೀತು ಮಾಡಿದ್ದಾರೆ.

ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮತ್ತು ವಕ್ಫ್ ಮಂಡಳಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ತವ್ಯಲೋಪ ಮಾಡುವ ಅಧಿಕಾರಿಗಳ ವಿರುದ್ಧ ಶೋಕಾಸ್ ನೋಟಿಸ್ ನೀಡಿ, ಶಿಸ್ತುಕ್ರಮ ಜರುಗಿಸಲಾಗುವುದು. ಇಲಾಖೆಗಳ ಅಧೀನದಲ್ಲಿ ನಡೆಸುತ್ತಿರುವ ಜಿಲ್ಲೆಯ ವಿವಿಧ ವಿದ್ಯಾರ್ಥಿ ವಸತಿನಿಲಯಗಳಲ್ಲಿ ವಾಸಿಸುವ ಎಸೆಸೆಲ್ಸಿ ಮತ್ತು ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳ ಕಳೆದ ಸಾಲಿನ ಫಲಿತಾಂಶ ತೃಪ್ತಿಕರವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವಂತೆ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿ ಸಜ್ಜುಗೊಳಿಸಬೇಕು. ಯಾವುದೆ ತರಗತಿ ವಿದ್ಯಾರ್ಥಿ ಅನುತ್ತೀರ್ಣವಾದರೆ ಸಂಬಂಧಿಸಿದ ತಾಲೂಕು ಮಟ್ಟದ ಅಧಿಕಾರಿಗಳನ್ನು ಮತ್ತು ಆಯಾ ವಸತಿ ನಿಲಯದ ನಿಲಯಪಾಲಕರನ್ನು ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಜರುಗಿಸಲಾಗಿವುದು ಎಂದು ಅಧಿಕಾರಿಗಳಿಗೆ ಮುಹಮ್ಮದ್ ಮೊಹ್ಸಿನ್ ಎಚ್ಚರಿಕೆ ನೀಡಿದರು.

ಸಮುದಾಯ ಭವನಗಳ ನಿಮಾರ್ಣ ಮತ್ತು ವಸತಿ ನಿಲಯಗಳ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ. ಅಡಚಣೆಗಳದ್ದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಜರುಗಿಸಿ ಪರಿಹರಿಸಿ ಮತ್ತು ಈ ಕುರಿತು ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಎಂದು ಅವರು ಸೂಚಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎನ್.ಆರ್.ಪುರುಷೋತ್ತಮ ಮಾತನಾಡಿ, ವಸತಿನಿಲಯಗಳಿಗೆ ಪ್ರವೇಶ, ಕಟ್ಟಡ ನಿರ್ಮಾಣ, ವಿದ್ಯಾಸಿರಿ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಳಲ್ಲಿ ನಿಗದಿತ ಪ್ರಗತಿ ಸಾಧಿಸಲಾಗಿದೆ ಎಂದರು.

ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಶೇ.88ರಷ್ಟು ಸಾಧನೆ ಮಾಡಲಾಗಿದೆ. ಬರುವ ಮಾರ್ಚ್‌ನೊಳಗೆ ಪೂರ್ಣ ಪ್ರಮಾಣದ ಗುರಿ ತಲುಪಲಾಗುವದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಗದೀಶ್‌ಕುಮಾರ್, ಜಿಲ್ಲಾ ವಕ್ಫ್ ಅಧಿಕಾರಿ ಎಚ್.ಎ.ಚೂಹೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ಗುರುರಾಜ ಕುಲಕರ್ಣಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಸತಿ ನಿಲಯಗಳ ನಿಲಯಪಾಲಕರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News