ಕರ್ನಾಟಕದವರು ಹರಾಮಿಗಳು ಎಂದ ಗೋವಾ ನೀರಾವರಿ ಸಚಿವ !

Update: 2018-01-14 12:29 GMT

ಬೆಳಗಾವಿ, ಜ. 14: ‘ಕರ್ನಾಟಕದವರು ಹರಾಮಿಗಳು, ಅವರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಮಹದಾಯಿ ಕಾಮಗಾರಿ ಪರಿಶೀಲನೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದೇವೆ’ ಎಂದು ಗೋವಾ ನೀರಾವರಿ ಸಚಿವ ವಿನೋದ್ ಪಾಳೇಕರ್ ಉದ್ದಟತನದ ಹೇಳಿಕೆ ನೀಡಿದ್ದಾರೆ.

ಗೋವಾ ನೀರಾವರಿ ಸಚಿವ ಪಾಳೇಕರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಸಚಿವರ ಪಾಳೇಕರ್ ಅವಹೇಳನಕಾರಿ ಹೇಳಿಕೆ ಸರಿಯಲ್ಲ. ಮಹದಾಯಿ ನೀರನ್ನು ಉಳಿಸಿಕೊಳ್ಳಲು ಶ್ರಮಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಮಧ್ಯೆ ಗೋವಾ ಸಚಿವ ಪಾಳೇಕರ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳ ಮುಖಂಡರು, ನಿಮ್ಮ ನಾಯಕರಿಗೆ ಬುದ್ದಿ ಹೇಳಿ. ನಿಮಗೆ ನಾಡಿನ ಬಗ್ಗೆ ಕಳಕಳಿ ಮತ್ತು ಸ್ವಾಭಿಮಾನವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಉದ್ಧಟತನದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ನಿನ್ನೆ ಗೋವಾ ರಾಜ್ಯದ ನೀರಾವರಿ ಇಲಾಖೆ ಅಧಿಕಾರಿಗಳು ಜಿಲ್ಲೆ ಖಾನಾಪುರ ತಾಲೂಕಿನ ಮಹದಾಯಿ ಉಗಮ ಸ್ಥಾನವಾದ ಕಣಕುಂಬಿಗೆ ಬಿಗಿ ಪೊಲೀಸ್ ಭದ್ರತೆಯ ಮಧ್ಯೆ ಆಗಮಿಸಿ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಕಾಮಗಾರಿ ಪರಿಶೀಲನೆ ನಡೆಸಿದ್ದರು.

‘ಗೋವಾ ಸರಕಾರ ಮಹದಾಯಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದು, ಸಣ್ಣತನ ಪ್ರದರ್ಶನ ಮಾಡುತ್ತಿದೆ. ಕೇಂದ್ರದ ಬಿಜೆಪಿ ನಾಯಕರು ಗೋವಾ ಸರಕಾರದೊಂದಿಗೆ ಕೈಜೋಡಿಸಿದ್ದು, ಕುಡಿಯುವ ನೀರಿನ ವಿಚಾರದಲ್ಲಿ ಸಂಕುಚಿತ ಮನೋಭಾವ ಪ್ರದರ್ಶನ ಸರಿಯಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮಧ್ಯಪ್ರವೇಶಿಸಬೇಕು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News