ಗೋವಾ ಸಚಿವರ ಹೇಳಿಕೆಗೆ ಖಂಡನೆ: ಬೆಂಗಳೂರಿನೆಲ್ಲೆಡೆ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ
ಬೆಂಗಳೂರು, ಜ.16: ಗೋವಾ ಬಿಜೆಪಿ ಸರಕಾರದ ನೀರಾವರಿ ಸಚಿವ ವಿನೋದ್ ಪಾಳೇಕರ್, ಕನ್ನಡಿಗರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು, ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಕಾರ್ಯಕರ್ತರು ಪಾಳೇಕರ್ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಪಾಳೇಕರ್ ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಕನ್ನಡ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ಗೋವಾ ಸಚಿವ ವಿನೋದ್ ಪಾಳೇಕರ್ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಉದ್ಧಟತನದ ಮಾತನಾಡಿ ಕನ್ನಡಿಗರನ್ನು ಕೆಣಕಿದ್ದಾರೆ. ಪಾಳೇಕರ್ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ವಿನೋದ್ ಪಾಳೇಕರ್ ಅವರನ್ನು ಸಚಿವ ಸಂಪುಟದಿಂದ ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿದರು. ಮಹಾದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ವಾಟಾಳ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಡಾ.ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಕನ್ನಡಪರ ಹೋರಾಟಗಾರ ಎಚ್.ವಿ. ಗಿರೀಶ್‌ಗೌಡ ಸೇರಿಪ್ರಮುಖರಿದ್ದರು.
ಕಾಂಗ್ರೆಸ್ ಪ್ರತಿಭಟನೆ: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಮೌರ್ಯ ಹೋಟೆಲ್ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಮಹಾದಾಯಿ ನದಿ ನೀರಿನ ವಿಚಾರದಲ್ಲಿ ಬೆಳಗಾವಿಯ ಕಣಕಂಬಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕನ್ನಡಿಗರಿಗೆ ಅವಹೇಳನಕಾರಿ ಪದ ಬಳಕೆ ಮಾಡಿ ಉದ್ಧಟತನದಿಂದ ಮಾತನಾಡಿರುವ ವಿನೋದ್ ಪಾಳೇಕರ್ ರಾಜ್ಯದ ಜನತೆಗೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಕವಿಕಾ ಅಧ್ಯಕ್ಷ ಎಸ್. ಮನೋಹರ್ ಒತ್ತಾಯಿಸಿದರು.
ಮಹಾದಾಯಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪತ್ರ ವ್ಯವಹಾರದ ನಾಟಕವಾಡಿ, ರಾಜ್ಯದ ಜನತೆಗೆ ದ್ರೋಹ ಮಾಡಿದ್ದಾರೆ. ಹೀಗಾಗಿ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಶೇಖರ್ ವಿ.ಹೇಮರಾಜ್, ಮಹಿಳಾ ಕಾರ್ಯಕರ್ತೆಯರು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
ಜ.18ರಂದು ಸಭೆ
ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಉದ್ಧಟತನದ ಹೇಳಿಕೆ ನೀಡಿರುವ ಗೋವಾ ಸರಕಾರದ ಸಚಿವರ ಹೇಳಿಕೆ ಖಂಡಿಸಿ ಜ.25 ರಂದು ಕರೆದಿರುವ ಕರ್ನಾಟಕ ಬಂದ್ ಬಗ್ಗೆ ಸಮಗ್ರ ಚರ್ಚೆ ನಡೆಸಲು ಜ.18 ರಂದು ನಗರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
-ಸಾ.ರಾ. ಗೋವಿಂದು, ಅಧ್ಯಕ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ