×
Ad

ಅಲ್ಪಸಂಖ್ಯಾತರ ಅಸ್ತಿತ್ವ ನಿರ್ನಾಮಕ್ಕೆ ಷಡ್ಯಂತ್ರ: ನಸೀರ್‌ ಅಹ್ಮದ್

Update: 2018-01-16 20:05 IST

ಬೆಂಗಳೂರು, ಜ.16: ಜೆಡಿಎಸ್, ಎಸ್‌ಡಿಪಿಐ, ಎಂಐಎಂ ಸೇರಿದಂತೆ ಇನ್ನಿತರ ಪಕ್ಷಗಳ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಕಣಕ್ಕಿಳಿಸುವ ಮೂಲಕ ಅಲ್ಪಸಂಖ್ಯಾತರ ಮತಗಳನ್ನು ವಿಭಜನೆ ಮಾಡಿ ಶಾಸನ ಸಭೆಗಳಲ್ಲಿ ನಮ್ಮ ಅಸ್ತಿತ್ವವನ್ನೆ ನಿರ್ನಾಮ ಮಾಡುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಸಿಎಂಎ ಸಭಾಂಗಣದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗವು ಬೆಂಗಳೂರು ಕೇಂದ್ರ, ಉತ್ತರ ಮತ್ತು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಅಲ್ಪಸಂಖ್ಯಾತರ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಮುದಾಯದ ಬುದ್ಧಿಜೀವಿಗಳು, ವಿಚಾರವಾದಿಗಳು, ಉಲಮಾಗಳು ಒಂದು ವೇದಿಕೆಗೆ ಬಂದು ಚರ್ಚಿಸಿ, ಅಲ್ಪಸಂಖ್ಯಾತರನ್ನು ಒಗ್ಗೂಡಿಸಬೇಕಾದ ಅಗತ್ಯವಿದೆ. ಇಡೀ ದೇಶದ ಗಮನ ಈಗ ಕರ್ನಾಟಕದತ್ತ ನೆಟ್ಟಿದೆ. 2019ನೆ ಸಾಲಿನ ಲೋಕಸಭಾ ಚುನಾವಣೆಗೆ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯು ದಿಕ್ಸೂಚಿಯಾಗಲಿದೆ ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ದೀಪಕ್‌ರಾವ್ ಕೊಲೆ ನಡೆದರೆ ಬಿಜೆಪಿ, ಆರೆಸೆಸ್ಸ್ ಬೀದಿಗಿಳಿದು ರಾಜ್ಯಾದ್ಯಂತ ಹೋರಾಟ ನಡೆಸುತ್ತದೆ. ಆದರೆ, ಅದೇ ದಿನ ಬಶೀರ್ ಹತ್ಯೆಯಾದರೆ ಯಾವ ಪ್ರತಿಭಟನೆಯೂ ನಡೆಯಲ್ಲ, ಆಕ್ರೋಶವು ವ್ಯಕ್ತವಾಗುವುದಿಲ್ಲ ಎಂದು ಅವರು ಹೇಳಿದರು.

ರಾಜ್ಯಸಭಾ ಸದಸ್ಯ ಡಾ.ಕೆ.ರಹ್ಮಾನ್‌ಖಾನ್ ಮಾತನಾಡಿ, ದೇಶದಲ್ಲಿ ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ. ಜಾತ್ಯತೀತ, ಪ್ರಜಾಪ್ರಭುತ್ವ ಸಂವಿಧಾನವನ್ನು ಅಮೆರಿಕಾದಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯ ರೀತಿಯಲ್ಲಿ ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ನಾವೆಲ್ಲ ಎಚ್ಚರಿಕೆಯಿಂದಿರಬೇಕು ಎಂದರು.

ಕೋಮುವಾದಿ ಶಕ್ತಿಗಳು ಕಾಂಗ್ರೆಸ್ ಪಕ್ಷವನ್ನು ಗುರಿಯನ್ನಾಗಿಸಿಕೊಂಡಿವೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಿಸಬೇಕೆಂಬುದು ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರಿಯಾಗಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಅವರು ಹೇಳಿದರು.

ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಯಾವ ಕಾರಣಕ್ಕೂ ಬಿಜೆಪಿಗೆ ಪರ್ಯಾಯವಾಗಲು ಸಾಧ್ಯವಿಲ್ಲ. ಜೆಡಿಎಸ್, ಎಸ್‌ಡಿಪಿಐ, ಎಂಐಎಂ ಸೇರಿದಂತೆ ಯಾರೊಬ್ಬರನ್ನೂ ನಂಬಬೇಡಿ, ಮುಸ್ಲಿಮರ ಪರವಾಗಿರುವುದಾಗಿ ಕಣ್ಣೀರು ಹಾಕಿ ನಿಮ್ಮನ್ನು ಮೋಸ ಮಾಡುತ್ತಾರೆ ಎಂದು ಅವರು ಆರೋಪಿಸಿದರು.

ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಖುರ್ಷಿದ್ ಅಹ್ಮದ್ ಸಯೀದ್ ಮಾತನಾಡಿ, ಮುಂಬರುವ ಎಪ್ರಿಲ್ ಅಂತ್ಯ ಅಥವಾ ಮೇ ಮೊದಲ ವಾರದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ಎದುರಾಗಲಿದೆ. ಇದೊಂದು ಐತಿಹಾಸಿಕವಾದ ಚುನಾವಣೆಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಜನರ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇವತ್ತು ನ್ಯಾಯಾಂಗ, ಪ್ರಜಾಪ್ರಭುತ್ವ, ಸಂವಿಧಾನ ಆತಂಕದಲ್ಲಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೃಢ ನಾಯಕತ್ವದಲ್ಲಿ ಸರಕಾರ ಮುನ್ನಡೆಯುತ್ತಿದೆ. ಸಿದ್ದರಾಮಯ್ಯ ಹೊರತುಪಡಿಸಿ ಕೇಸರಿ ಭಯೋತ್ಪಾದನೆ ಬಗ್ಗೆ ಮಾತನಾಡುವ ಧೈರ್ಯ ದೇಶದ ಯಾವ ಮುಖ್ಯಮಂತ್ರಿಗೂ ಇಲ್ಲ. ಬಿಜೆಪಿಯವರ ಯಾವ ಆಶ್ವಾಸನೆಗೂ ಜನ ಮರುಳಾಗಬಾರದು ಎಂದು ಅವರು ತಿಳಿಸಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಗುಜರಾತ್ ಹಾಗೂ ಉತ್ತರಪ್ರದೇಶದಲ್ಲಿ ಅದೇ ರೀತಿಯ ವಾತಾವರಣ ಸೃಷ್ಟಿಸಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ನಮ್ಮ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಹ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ರೋಷನ್‌ಬೇಗ್, ಯು.ಟಿ.ಖಾದರ್, ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿಗೌಡ್, ಸೂರಜ್ ಹೆಗ್ಡೆ, ವಿಧಾನಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ರಿಝ್ವಾನ್ ಅರ್ಶದ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ವೈ.ಸಯೀದ್ ಅಹ್ಮದ್, ಬೆಂಗಳೂರು ವಿಭಾಗೀಯ ಅಧ್ಯಕ್ಷ ಮುದಬ್ಬೀರ್ ಅಹ್ಮದ್‌ಖಾನ್ ಸೇರಿಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News