×
Ad

ಶಿವಮೊಗ್ಗ: ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ

Update: 2018-01-17 19:07 IST

ಶಿವಮೊಗ್ಗ, ಜ. 17: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘವು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಕೇಂದ್ರ - ರಾಜ್ಯ ಸರ್ಕಾರಗಳಿಗೆ ಮನವಿ ಪತ್ರ ಅರ್ಪಿಸಿತು. 

ಸಮಗ್ರ ಶಿಶು ಅಭಿವೃದ್ದಿ ಯೋಜನೆ ಪ್ರಾರಂಭವಾಗಿ ಸುಮಾರು 42 ವರ್ಷಗಳಾಗಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ರಾಜ್ಯ ಸರ್ಕಾರದ ಸಹಭಾಗಿತ್ವವಿದೆ. ಇದರಡಿ ಲಕ್ಷಾಂತರ ಕಾರ್ಯಕರ್ತೆಯರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ.

ಆದರೆ ಕೆಲಸಕ್ಕೆ ತಕ್ಕಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೌಲಭ್ಯ, ಭತ್ಯೆಗಳು ಲಭ್ಯವಾಗುತ್ತಿಲ್ಲ. ಅತ್ಯಂತ ದಯನೀಯ ಸ್ಥಿತಿಯಲ್ಲಿ ಕಾರ್ಯನಿರ್ವಹಣೆ ಮಾಡುವಂತಾಗಿದೆ. ಅತ್ಯಲ್ಪ ಮಾಸಿಕ ಗೌರವ ಧನಕ್ಕೆ ವರ್ಷವೀಡಿ ದುಡಿಯುವಂತಾಗಿದೆ. ಹಲವು ಬಾರಿ ಪ್ರತಿಭಟನೆ, ಮನವಿ ಅರ್ಪಿಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವ ಕೆಲಸ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೇಡಿಕೆ ಈಡೇರಿಕೆಗೆ ಯಾವುದೇ ಕ್ರಮಕೈಗೊಂಡಿಲ್ಲವೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೇಡಿಕೆಗಳು: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸೇವೆ ಖಾಯಂಗೊಳಿಸಬೇಕು. ಕನಿಷ್ಟ 18 ಸಾವಿರ ವೇತನ ಹಾಗೂ 3 ಸಾವಿರ ರೂ. ಪಿಂಚಣಿ ಜಾರಿಗೆ ತರಬೇಕು. ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಬೇಕು. ಇಚ್ಚಿಸಿದಾಗ ಪರಿಹಾರ ಸಮೇತ ಸ್ವಯಂ ಘೋಷಣಾ ನಿವೃತ್ತಿ ನೀಡಬೇಕು. ಸೇವಾ ಹಿರಿತನದ ಮೇಲೆ ವೇತನ ಹೆಚ್ಚಿಸಬೇಕು. 

ಮಾತೃಪೂರ್ಣ ಯೋಜನೆಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಬೇಸಿಗೆ ರಜೆ 15 ದಿನದ ಬದಲು ಒಂದು ತಿಂಗಳಿಗೆ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಇತರೆ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡುವಾಗ 15 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಶೇ.30 ರಷ್ಟು ಮೀಸಲಾತಿ ನೀಡಬೇಕು. ವಿಶೇಷ ಯೋಜನೆಯಡಿ ಮನೆ ಕಟ್ಟಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಕೇಂದ್ರ - ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಬಿ.ಪ್ರೇಮಾ, ಭಾರತಿ, ಶಾಂತ, ವರಕ್ಷ್ಮೀ, ಸಂಪತ್ ಕುಮಾರಿ ಸೇರಿದಂತೆ ಮೊದಲಾದವರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News