ಸನ್ನಡತೆ ಆಧಾರದಲ್ಲಿ 109 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ತೀರ್ಮಾನ: ಟಿ.ಬಿ.ಜಯಚಂದ್ರ

Update: 2018-01-17 15:34 GMT

ಬೆಂಗಳೂರು, ಜ.17: ರಾಜ್ಯದ ವಿವಿಧ ಕಾರಾಗೃಹಗಳಲ್ಲಿನ 109 ಕೈದಿಗಳನ್ನು (105 ಪುರುಷ ಹಾಗೂ ನಾಲ್ವರು ಮಹಿಳಾ ಕೈದಿಗಳು) ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯವನ್ನು ತಿಳಿಸಿದರು.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡ್ತೆರೆ ಗ್ರಾಮದ ಸ.ನಂ.264/1ರಲ್ಲಿ 8.32 ಎಕರೆ ಜಮೀನನ್ನು ಬಸ್ ನಿಲ್ದಾಣ ಮತ್ತು ಬಸ್ ನಿರ್ಮಾಣಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮಂಜೂರು ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಅವರು ಹೇಳಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶ್ರೀ ಬಿರೇಶ್ವರ ಪಂಚ ಸಮಿತಿಗೆ ಗುಮ್ಮನಹಳ್ಳಿ ಗ್ರಾಮದಲ್ಲಿ 3 ಎಕರೆ ಮುಫತ್ ಗಾಯರಾಣ ಜಮೀನನ್ನು ಕನಕ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ತಿಳಿಸಿದರು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಉದ್ಯಮಿ ಬಿ.ಆರ್.ಶೆಟ್ಟಿಗೆ 25 ಎಕರೆ ಭೂಮಿ ಮಂಜೂರು ಮಾಡಲು ನಿರ್ಧರಿಸಲಾಗಿದೆ ಅವರು ಹೇಳಿದರು.

ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-1ರ ಕ್ರಮ ಸಂಖ್ಯೆ 86ರಲ್ಲಿ ಗೊಲ್ಲ ಜಾತಿಯೊಂದಿಗೆ ಕಾಡುಗೊಲ್ಲ ಹಾಗೂ ಹಟ್ಟಿಗೊಲ್ಲ ಎಂಬ ಪರ್ಯಾಯ ಪದಗಳನ್ನು ಸೇರಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಅಲ್ಲದೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ ವಿಧೇಯಕ, 2016 ಹಾಗೂ ಖ್ವಾಜಾ ಬಂದೇನವಾಝ್ ವಿಶ್ವವಿದ್ಯಾಲಯ ವಿಧೇಯಕ, 2017ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಎಂಡ್-ಟು-ಎಂಡ್ ಆಟೋಮೇಷನ್‌ನ್ನು ಅಳವಡಿಸಲು ಕೇರಳ ಸ್ಟೇಟ್ ಎಲೆಕ್ಟ್ರಾನಿಕ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ ಇವರಿಂದ ಸಿಸ್ಟಮ್ ಇಂಟಿಗ್ರೇಷನ್‌ನ್ನು 51.34 ಕೋಟಿ ರೂ.ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿನ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿರುವ ತಾಲೂಕು ಮಟ್ಟದ ಆಸ್ಪತ್ರೆಯ ಕಟ್ಟಡ ಹಾಗೂ ಸಿಬ್ಬಂದಿ ವಸತಿ ಗೃಹಗಳನ್ನು 16.50 ಕೋಟಿ ರೂ.ಅಂದಾಜು ಮೊತ್ತದಲ್ಲಿ ನಿರ್ಮಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಜಯಚಂದ್ರ ಹೇಳಿದರು.

ಮೈಸೂರು ನಗರ ಪೊಲೀಸ್ ಆಯುಕ್ತರ ಹೊಸ ಕಚೇರಿ ಕಟ್ಟಡದ ಹೆಚ್ಚುವರಿ ನಿರ್ಮಾಣ ಕಾಮಗಾರಿಗಳನ್ನು 4.10 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲು ಅನುಮೊದನೆ ನೀಡಲಾಗಿದೆ. ಬಳ್ಳಾರಿ ಜಿಲ್ಲೆಯ 89 ಸಾವಿರ ಫಲಾನುಭವಿಗಳಿಗೆ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಅನಿಲ ಸಂಪರ್ಕ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಅಲ್ಲದೆ, ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದ 22 ಅಧ್ಯಾಪಕರ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ದಾಂಡೇಲಿ ನಗರಕ್ಕೆ ಒಳಚರಂಡಿ ಯೋಜನೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 146.51 ಕೋಟಿ ರೂ.ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣಕ್ಕೆ 76.20 ಕೋಟಿ ರೂ.ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಜಯಚಂದ್ರ ಹೇಳಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಹೋಬಳಿಯ ನ್ಯಾಮತಿ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಸೇರಿದ ಚಿನ್ನಿಕಟ್ಟೆ ಗ್ರಾಮದ ಸ.ನಂ.219 ಮತ್ತು 220ರಲ್ಲಿನ 15-23 ಎಕರೆ ಜಮೀನನ್ನು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನಕ್ಕೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಹೈಕೋರ್ಟ್‌ನಲ್ಲಿ ಸಮಗ್ರ ನ್ಯಾಯಾಲಯ ಪ್ರಕರಣ ನಿರ್ವಹಣಾ ವ್ಯವಸ್ಥೆಯನ್ನು (ಐಸಿಎಂಎಸ್) 43.50 ಕೋಟಿ ರೂ.ಮೊತ್ತದಲ್ಲಿ ಬೆಂಗಳೂರು ಸೇರಿದಂತೆ ಕಲಬುರ್ಗಿ ಹಾಗೂ ಧಾರವಾಡ ಸಂಚಾರಿ ಪೀಠಗಳಲ್ಲೂ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
-ಟಿ.ಬಿ.ಜಯಚಂದ್ರ, ಕಾನೂನು ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News