ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಸೂಚನೆ: ಹೆಚ್.ಡಿ.ದೇವೇಗೌಡ

Update: 2018-01-19 17:38 GMT

ಚಿಕ್ಕಮಗಳೂರು. ಜ.19:  ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ಪ್ರತಿ ಶತ 100 ರಷ್ಟು ಅನುಷ್ಠಾನಗೊಳಿಸಬೇಕೆಂದು ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶುಕ್ರವಾರ ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮತ್ತು ರಾಷ್ಟ್ರೀಯ ಮಧ್ಯಮ ಶಿಕ್ಷಣ ಯೋಜನೆಗಳು ಕಳೆದ ನಾಲ್ಕು ವರ್ಷಗಳಿಂದ ರಾಜ್ಯಕ್ಕೆ ಯಾವುದೇ ರೀತಿಯ ಅನುದಾನ ಬಿಡುಗಡೆಯಾಗಿರುವುದಿಲ್ಲ. ಆದ್ದರಿಂದ ರಾಜ್ಯಕ್ಕೆ ಬಹಳ ಅನ್ಯಾಯವಾಗುತ್ತಿದೆ ಎಂದ ಅವರು ಕೇಂದ್ರ ಸರ್ಕಾರದ ಜನರಿಕ್ ಔಷಧಿ ಮಳಿಗೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ 12 ಗಂಟೆಗಳ ಕಾಲ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳಷ್ಟಿದ್ದು, ಅದನ್ನು ನಿವಾರಿಸಲು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ರೈತರಿಗೆ ಪಶುಪಾಲನೆ ಉಪ ಕಸುಬಾಗಿದ್ದು, ಅವರ ಜೀವನ ನಿರ್ವಹಣೆಗೆ ಸಹಕಾರಿಯಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಹಾಲಿನ ಡೈರಿ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.

ಕಡೂರು ಕ್ಷೇತ್ರದ ಶಾಸಕ ವೈ.ಎಸ್.ವಿ.ದತ್ತ ರವರು ಕಡೂರು ತಾಲ್ಲೂಕಿನಲ್ಲಿ ಮರಳಿನ ಸಮಸ್ಯೆ ಇದೆ ಎಂದು ಪ್ರಸ್ತಾಪಿಸಿ ಮರಳಿನ ಸಮಸ್ಯೆ ನಿವಾರಿಸುವಂತೆ ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಮರಳಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದೆಂದರು.

ಮೂಡಿಗೆರೆ ತಾಲೂಕಿನಲ್ಲಿ ಸ್ವಚ್ಚ ಭಾರತ್ ಯೋಜನೆಯಡಿ ಸ್ವಚ್ಚಮಾಡಿದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸ್ಥಳವನ್ನು 2 ದಿನಗಳೊಳಗೆ ಮಂಜೂರು ಮಾಡುವುದಾಗಿ ತಿಳಿಸಿದ ಅವರು ಅಲ್ಲಿಯ ಸರ್ಕಾರಿ ಜಮೀನನ್ನು ಗುರುತಿಸಿ ಕೊಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಶ್ರೀರಂಗಯ್ಯ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಮಳೆಯ ಪ್ರಮಾಣ ಹೆಚ್ಚಾದಾಗ ಮಾತ್ರ ನೀರಿನ ಸಮಸ್ಯೆಯನ್ನು ನಿವಾರಿಸಬಹುದು. ಅಲ್ಲಿಯವರೆಗೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದ ಅವರು, ಬರ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ, ಜಿಪಂ ಸಿಇಓ ಸಿ.ಸತ್ಯಭಾಮ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News