×
Ad

ಮುಂದುವರಿದ ಪಾಕ್ ದಾಳಿ: ಯೋಧ ಸೇರಿದಂತೆ ನಾಲ್ವರು ಬಲಿ

Update: 2018-01-20 18:25 IST

 ಶ್ರೀನಗರ, ಜ.20: ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಸತತ ಮೂರನೇ ದಿನ ಪಾಕಿಸ್ತಾನದ ಸೇನೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದು, 15 ವರ್ಷದ ಬಾಲಕನೂ ಸೇರಿದಂತೆ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

  ಕಳೆದ ಮೂರು ದಿನಗಳಿಂದ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ನಡೆಸಿರುವ ಗುಂಡಿನ ದಾಳಿಯಲ್ಲಿ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಪೂಂಛ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧ ಮಂದೀಪ್ ಸಿಂಗ್ ಹುತಾತ್ಮರಾಗಿದ್ದು , ಅಖ್ನೂರ್‌ನಿಂದ ಆರ್‌ಎಸ್ ಪುರದವರೆಗಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗ್ರಾಮಸ್ಥರನ್ನು ಗುರಿಯಾಗಿಸಿಕೊಂಡು ಪಾಕ್ ಪಡೆಗಳು ಗುಂಡಿನ ದಾಳಿ ನಡೆಸಿವೆ. ಭಾರತದ ಸೇನೆ ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಗಡಿಭಾಗದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಇರುವ ಕಾರಣ ಗಡಿಭಾಗದ ಗ್ರಾಮಗಳ 10,000ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದ್ದು, ಆರ್‌ಎಸ್ ಪುರ, ಸಾಂಬ ಹಾಗೂ ಕಥುವಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಶಿಬಿರದಲ್ಲಿ 1,000ಕ್ಕೂ ಹೆಚ್ಚು ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಅಲ್ಲದೆ ಈ ಪ್ರದೇಶದ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.

  ಈ ಮಧ್ಯೆ, ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷಗಳು ಗಡಿಯಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸುತ್ತಿರುವ ಗುಂಡಿನ ದಾಳಿಯಿಂದ ಗ್ರಾಮಸ್ಥರಿಗೆ ರಕ್ಷಣೆ ನೀಡಲು ಸರಕಾರ ವಿಫಲವಾಗಿದೆ ಎಂದು ಆರೋಪಿಸಿದವು. ಸರಕಾರ ನಿಷ್ಕ್ರಿಯವಾಗಿದೆ ಎಂದು ಟೀಕಿಸಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News