ಜ.25 ರಂದು ಕರ್ನಾಟಕ ಬಂದ್ : ಕನ್ನಡ ಚಳವಳಿ ಒಕ್ಕೂಟದ ವತಿಯಿಂದ ರ್ಯಾಲಿ
ಬೆಂಗಳೂರು, ಜ.20: ಮಹಾದಾಯಿ-ಕಳಸಾ ಬಂಡೂರಿ ಯೋಜನೆ ಜಾರಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಜ.25 ರಂದು ಕರೆ ನೀಡಿರುವ ಅಖಿಲ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡುವ ಸಲುವಾಗಿ ಕನ್ನಡ ಚಳವಳಿ ಒಕ್ಕೂಟದ ವತಿಯಿಂದ ನಗರದಲ್ಲಿ ರ್ಯಾಲಿ ನಡೆಸಲಾಯಿತು.
ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಿಂದ ಕೆಂಪೇಗೌಡ ಬಸ್ ನಿಲ್ದಾಣದವರೆಗೂ ಹರಡಿಕೊಂಡಿರುವ ಚಿತ್ರಮಂದಿರಗಳಿಗೆ ತೆರಳಿ ಚಿತ್ರ ಪ್ರದರ್ಶನ ಮಾಡದಂತೆ ಹಾಗೂ ನಗರದ ಹಲವು ಕಡೆಗಳಲ್ಲಿ ಸಂಚಾರ ಮಾಡಿದ ಕನ್ನಡ ಚಳವಳಿಗಾರರು ಮಾಲ್‌ಗಳಿಗೆ ಭೇಟಿ ನೀಡಿ ಅಂದು ಮಾಲ್‌ಗಳನ್ನು ತೆರೆಯದಂತೆ ಮನವಿ ಮಾಡಿ ಬಂದ್ ಬೆಂಬಲಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಕೂಡಲೇ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜಕೀಯ ಮಾಡುತ್ತಾ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನೆಲ, ಜಲ, ಭಾಷೆ ವಿಚಾರದಲ್ಲಿ ನೆರೆ ರಾಜ್ಯಗಳಲ್ಲಿ ಎಲ್ಲರೂ ಒಂದಾಗುತ್ತಾರೆ. ಅದೇ ರೀತಿಯಲ್ಲಿ ಇಲ್ಲಿಯೂ ಎಲ್ಲ ಒಂದಾಗಿ ಹೋರಾಟ ಮಾಡೋಣ. ಬಿಜೆಪಿ ಸಂಸದರು ಪ್ರಧಾನಿ ಮೇಲೆ ಒತ್ತಡ ತರಬೇಕು. ಆದರೆ, ಬಿಜೆಪಿ ರಾಜಕೀಯ ಮಾಡುತ್ತಿದ್ದು, ಪ್ರಧಾನಿಗೆ ರಾಜ್ಯದ ಬಿಜೆಪಿ ಸಂಸದರು ಹೆದರುತ್ತಿದ್ದಾರೆ ಎಂದು ಆರೋಪಿಸಿದ ವಾಟಾಳ್ ನಾಗರಾಜ್, ಈ ಕುರಿತು ಕೇಂದ್ರ ಸರಕಾರ ಸ್ಪಷ್ಟ ನಿರ್ಧಾರ ಪ್ರಕಟಿಸುವವರೆಗೂ ನಾವು ನಮ್ಮ ಹೋರಾಟ ಹಿಂಪಡೆಯುವುದಿಲ್ಲ ಎಂದು ಹೇಳಿದರು.
ಮಹಾದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕದಲ್ಲಿ 2 ವರ್ಷಗಳಿಂದ ನಿರಂತರ ಚಳವಳಿ ನಡೆಯುತ್ತಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದು ಬಿಟ್ಟರೆ ಮತ್ತೇನೂ ಮಾಡಿಲ್ಲ. ಸತತ ಎರಡು ವರ್ಷಗಳಿಂದ ಹೋರಾಟವನ್ನು ದಮನ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. ಹೀಗಾಗಿ, ಮೋದಿ ಮಧ್ಯಪ್ರವೇಶ ಮಾಡದಿದ್ದರೆ ಚಳವಳಿ ಮತ್ತಷ್ಟು ತೀವ್ರಗೊಳ್ಳುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.