ಟೆಕ್ಕಿ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣ: ತನಿಖೆಯ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2018-01-22 14:26 GMT

ಬೆಂಗಳೂರು, ಜ.22: ಸಾಫ್ಟ್‌ವೇರ್ ಎಂಜಿನಿಯರ್ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಕೈಗೊಂಡಿರುವ ಕ್ರಮ ಹಾಗೂ ತನಿಖೆಯ ಪ್ರಗತಿ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜ.29ಕ್ಕೆ ಮುಂದೂಡಿದೆ.

ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಜಿತಾಬ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ, ಎಸ್‌ಐಟಿಗೆ ತನಿಖೆಯ ಪ್ರಗತಿ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆ ಪೀಠಕ್ಕೆ ಸಲ್ಲಿಸುವಂತೆ ಸೂಚಿಸಿತು.

ಸರಕಾರದ ಪರ ವಾದಿಸಿದ ವಕೀಲರು, ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಮುಂದಿನ ವಿಚಾರಣೆ ವೇಳೆ ಪ್ರಗತಿಯ ವರದಿಯನ್ನು ಸಲ್ಲಿಸಲು ಸೂಚಿಸಿತು.

ಪ್ರಕರಣವೇನು: ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಜಿತಾಬ್ ಅವರು 2017ರ ಡಿ.18ರ ಸಂಜೆ 6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ತಂದೆ ವೈಟ್‌ಫೀಲ್ಡ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪೊಲೀಸರು ಕುಮಾರ್ ಅಜಿತಾಬ್ ನಾಪತ್ತೆಯಾಗಿರುವ ಬಗ್ಗೆ 2017ರ ಡಿ.20 ಹಾಗೂ 29ರಂದು ಎರಡು ಎಫ್‌ಐಆರ್ ದಾಖಲಿಸಿದ್ದರು. ಆದರೆ, ಈವೆರಗೂ ಆತ ಪತ್ತೆಯಾಗಿಲ್ಲ. ಇದರಿಂದ ಹೈಕೋರ್ಟ್ ಮಟ್ಟಿಲೇರಿರುವ ತಂದೆ ಅಶೋಕ್ ಕುಮಾರ್ ಸಿನ್ಹಾ, ಪೊಲೀಸರು ಈವರೆಗೂ ನನ್ನ ಮಗನನ್ನು ಪತ್ತೆ ಹಚ್ಚಿಲ್ಲ. ಹೀಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News