ಮನೆ ನಿರ್ಮಾಣ : ಪ್ರಗತಿ ಸಾಧಿಸಲು ದ.ಕ. ಜಿಪಂ ಅಧ್ಯಕ್ಷೆ ಸೂಚನೆ
ಮಂಗಳೂರು, ಜ.22: ದ.ಕ.ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಗಳಡಿ ಮನೆಗಳಿಗೆ ಹೆಚ್ಚಿನ ಬೇಡಿಕೆಯಿದ್ದು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಸತಿರಹಿತ ಕುಟುಂಬಗಳಿಗೆ ಶೀಘ್ರವಾಗಿ ಮನೆ ನಿರ್ಮಾಣ ಮಾಡಿಕೊಡುವಂತೆ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ.
ದ.ಕ. ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ವರ್ಷದಲ್ಲಿ 8,300 ಮನೆ ನಿರ್ಮಾಣದ ಗುರಿಯ ಪೈಕಿ 4566 ಮನೆಗಳು ಪೂರ್ಣಗೊಂಡಿದೆ. ಇನ್ನುಳಿದಿರುವ 3,734 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಕಳೆದ ಎರಡು ವಷಗಳಿಂದ ಶೇ.100ರಷ್ಟು ಮನೆ ನಿರ್ಮಾಣದ ಗುರಿಯನ್ನು ತಲುಪಲು ಸಾಧ್ಯವಾಗಿದ್ದು, ಈ ವರ್ಷವೂ ಮಾರ್ಚ್ ಅಂತ್ಯದೊಳಗೆ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಸೂಚಿಸಿದರು.
ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಸಾರ್ವಜನಿಕರ ಜತೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ. ಅವರ ವಿರುದ್ದ ಕಾನೂನು ಕ್ರಮಕೈಗೊಳ್ಳಬೇಕು. ಸರಕಾರಿ ಶ್ರದ್ಧಾಂಜಲಿ ವಾಹನವು ಚಾಲಕನಿಲ್ಲದೆ ಕಾರ್ಯನಿರ್ವಹಿಸುತ್ತಿಲ್ಲ. ಶೀಘ್ರ ಚಾಲಕರನ್ನು ನೇಮಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಪಂ ಉಪ ಕಾರ್ಯದರ್ಶಿ ಎಂ.ವಿ.ನಾಯಕ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.