ಬೀದರ್‌ನಲ್ಲಿ ಸರಕಾರಿ ಯುನಾನಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಮನವಿ

Update: 2018-01-23 15:01 GMT

ಬೆಂಗಳೂರು, ಜ.23: 2018-19ನೆ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೀದರ್ ಜಿಲ್ಲೆಯಲ್ಲಿ ಸರಕಾರಿ ಯುನಾನಿ ವೈದ್ಯಕೀಯ ಕಾಲೇಜು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಯುನಾನಿ ವೆಲ್ಫೇರ್ ಫೌಂಡೇಷನ್ ಟ್ರಸ್ಟ್ ಮನವಿ ಮಾಡಿದೆ.

ರಾಜ್ಯಸಭಾ ಸದಸ್ಯ ಡಾ.ಕೆ.ರಹ್ಮಾನ್‌ಖಾನ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕರ್ನಾಟಕ ಯುನಾನಿ ವೆಲ್ಫೇರ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಡಾ.ನಸೀಮ್ ಅಹ್ಮದ್ ನೇತೃತ್ವದ ನಿಯೋಗದಲ್ಲಿ, ಬೀದರ್‌ನ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಅಬ್ದುಲ್ ಮನ್ನಾನ್ ಸೇಠ್ ಹಾಗೂ ಎಸ್‌ಐಓ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಸ್ಲಂ ಉಪಸ್ಥಿತರಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ರಹ್ಮಾನ್‌ಖಾನ್, ಬೀದರ್ ಭಾಗದಲ್ಲಿ ಯುನಾನಿ ವೈದ್ಯರು ಹಾಗೂ ಯುನಾನಿ ಶಿಕ್ಷಣಕ್ಕೆ ಸಾಕಷ್ಟು ಬೇಡಿಕೆಯಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಯುನಾನಿ ವೈದ್ಯಕೀಯ ಪದ್ಧತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ನೇತೃತ್ವದಲ್ಲಿ ಹಲವಾರು ಸಂಘ ಸಂಸ್ಥೆಗಳು ಕಳೆದ ಬಜೆಟ್ ಸಂದರ್ಭದಲ್ಲಿ ಯುನಾನಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ವಿಚಾರದಲ್ಲಿ ತಮ್ಮ ಜತೆ ಚರ್ಚೆ ನಡೆಸಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಡಾ.ನಸೀಮ್ ಅಹ್ಮದ್, ಬೀದರ್ ಜಿಲ್ಲೆಯಲ್ಲಿ ಸರಕಾರಿ ಯುನಾನಿ ವೈದ್ಯಕೀಯ ಕಾಲೇಜು ತೆರೆಯಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಕಳೆದ ವರ್ಷದ ಬಜೆಟ್‌ನಲ್ಲಿ ಇದು ಘೋಷಣೆಯಾಗುತ್ತದೆ ಎಂಬ ನಮ್ಮ ನಿರೀಕ್ಷೆ ಹುಸಿಯಾಗಿತ್ತು. ಈ ಬಾರಿಯಾದರೂ ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಯುನಾನಿ ವೈದ್ಯಕೀಯ ಕಾಲೇಜು ಘೋಷಣೆಯಾಗಲಿ ಎಂಬುದು ನಮ್ಮ ಆಶಯ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News