ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಆರೋಪ: ಎಸಿಬಿ ವಕೀಲರಿಂದ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಕೆ

Update: 2018-01-23 15:27 GMT

ಬೆಂಗಳೂರು, ಜ.23: ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಆರ್.ಅಶೋಕ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ವಕೀಲರಿಂದ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಕೆಯಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಖಲಿಸಿರುವ ಎಫ್‌ಐಆರ್ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ, ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿತ್ತು. ಹೀಗಾಗಿ, ಎಸಿಬಿ ಪರ ವಕೀಲರು ಮಂಗಳವಾರ ಆಕ್ಷೇಪಣೆ ಸಲ್ಲಿಸಿದರು. ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ.

ಪ್ರಕರಣವೇನು: ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾಗ ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಅಶೋಕ್, ತಾವು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಆಧರಿಸಿ ತಮ್ಮ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News