ಕೇಂದ್ರ ಸರಕಾರ, ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳಿಗೆ ಹೈಕೋರ್ಟ್ ತುರ್ತು ನೋಟಿಸ್

Update: 2018-01-23 15:53 GMT

ಬೆಂಗಳೂರು, ಜ.23: ಲಿಕ್ವಿಡ್ ಪೆಟ್ರೋಲಿಯಂ ಗ್ಯಾಸ್(ಎಲ್‌ಪಿಜಿ) ವಿತರಕರ ಹುದ್ದೆಗಳಲ್ಲಿ ವಿಕಲಚೇತನರಿಗೆ ಶೇ.5ರಷ್ಟು ಮೀಸಲಾತಿಯನ್ನು ಕಲ್ಪಿಸದೆ ಸಂವಿಧಾನದ ಆರ್‌ಪಿಡಿ ಕಾಯ್ದೆ ಉಲ್ಲಂಘಿಸಿರುವ ಸಂಬಂಧ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಕೇಂದ್ರ ಸರಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ವಿಕಲಚೇತನರ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜ್ಯದಲ್ಲಿ 238 ಎಲ್‌ಪಿಜಿ ವಿತರಕರ ಹುದ್ದೆಗಳಿಗೆ ಜಾಹೀರಾತು ನೀಡಲಾಗಿತ್ತು. ಆದರೆ, ಮೀಸಲಾತಿ ಪ್ರಕಾರ ವಿಕಲಚೇತನರಿಗೆ 11 ವಿತರಕರ ಹುದ್ದೆಗಳನ್ನು ಮೀಸಲಿಡದೆ ಬರೀ 6 ಹುದ್ದೆಗಳನ್ನು ಮೀಸಲಿಟ್ಟಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಕಾಯ್ದೆಗೆ ಅನುಗುಣವಾಗಿ ಎಲ್‌ಪಿಜಿ ವಿತರಕರ ಹುದ್ದೆಗಳಿಗೆ ವಿಕಲಚೇತನರಿಗೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರಕಾರಕ್ಕೆ ಹಾಗೂ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳಿಗೆ ಆದೇಶಿಸುವಂತೆ ಅರ್ಜಿಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News